
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ದಿಟ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಂಜಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ (25) ಮೃತ ಯುವತಿಯಾಗಿದ್ದಾರೆ.
ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೊನಿಷಾ ಹೊರಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮೀಪದಲ್ಲಿದ್ದ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಬಳಿಕ ಅವರನ್ನು ರಕ್ಷಿಸಲು ಯತ್ನಿಸಿದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


