ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಘೋಷಣೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ನಾಯಕನನ್ನು ಅಂತಿಮಗೊಳಿಸಿದ್ದು, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಫೈನಲ್ ಮಾಡಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಸೋಲಿನಾ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಹಾಗೂ ಸಿಎಲ್ ಪಿ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ನಾಯಕರ ಭಾರಿ ಲಾಬಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಹೆಸರು ಫೈನಲ್ ಮಾಡಿದ್ದು, ನಾಳೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನಾಲ್ಕು ಜನರನ್ನು ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಮುಸ್ಲೀಂ ಕೋಟಾದಲ್ಲಿ ಜಮೀರ್ ಅಹ್ಮದ್, ಎಸ್ ಟಿ ಕೋಟಾದಲ್ಲಿ ಸತೀಶ್ ಜಾರಕಿಹೊಳಿ, ಲಿಂಗಾಯತ ಕೋಟಾದಲ್ಲಿ ಈಶ್ವರ ಖಂಡ್ರೆಯವರೇ ಮೂಂದುವರೆಯುವ ಸಾಧ್ಯಾತೆಯಿದೆ ಎನ್ನಲಾಗಿದೆ.

ಇನ್ನು ವಿಪಕ್ಷ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕೂಡ ಸೋನಿಯಾಗಾಂಧಿಯವರನ್ನು ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಅಂತಿಮ ಹಂತದ ಮಾತುಕತೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button