
ಪ್ರಗತಿವಾಹಿನಿ ಸುದ್ದಿ : ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದು 11 ಸಿಬ್ಬಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಒಡಿಶಾದ ಕಟಕ್ ನಗರದ ಎಸ್ ಸಿ ಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಅವಘಡ ಸಂಭವುಸಿದೆ. ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯು ಯಲ್ಲಿ ಸುಮಾರು ರಾತ್ರಿ 2.30 ರಿಂದ 3 ಗಂಟೆ ನಡುವೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಹೊತ್ತಿಕೊಂಡ ತಕ್ಷಣ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿತು.
ಈ ಅವಘಡದಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ರೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೂ 3 ಮಂದಿ ರೋಗಿಗಳು ಬೇರೆ ವಾರ್ಡ್ ಗೆ ಸ್ಥಳಾಂತರಿಸುವ ವೇಳೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚುವರಿ ರೋಗಿಗಳನ್ನು ತಕ್ಷಣವೇ ಆಸ್ಪತ್ರೆಯ ಬೇರೆ ವಿಭಾಗಗಳಿಗೆ ಹಾಗೂ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದ್ದು ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.



