*ಭಾರಿ ಮಳೆಗೆ ಗೋಡೆ ಕುಸಿದು ಬೆಳಗಾವಿಯಲ್ಲಿ ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಹಲವೆಡೆ ಮಂಗಳವಾರ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು ಬೆಳಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಮಳೆಯಬ್ಬರಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ವಂಟಮೂರಿ ಗ್ರಾಮದ ಪರ್ವಿನ್ ಬೇಪಾರಿ (34) ಮೃತ ದುರ್ದೈವಿ. ಮಳೆಯಬ್ಬರಕ್ಕೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಅದೇ ವೇಳೆ ಅವರ ಪತಿ ಶರೀಫ್ ಬೇಪಾರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಂಪತಿ ಕೋಳಿಗಳನ್ನು ಮಾರಾಟ ಮಾಡಲು ಬೈಕ್ನಲ್ಲಿ ತೆರಳುತ್ತಿದ್ದಾಗ ಮಳೆ ತೀವ್ರಗೊಂಡಿತ್ತು. ಈ ಹಿನ್ನೆಲೆ ಅವರು ಹೊಸೂರ ಗ್ರಾಮದ ಪಾಳು ಮನೆಯ ಕೆಳಗೆ ಆಶ್ರಯ ಪಡೆದಿದ್ದರು. ಇದೇ ವೇಳೆ ಏಕಾಏಕಿ ಗೋಡೆ ಕುಸಿದು ಬಿದ್ದಿದೆ.
ಪರಿಣಾಮ ಪರ್ವಿನ್ ಸ್ಥಳದಲ್ಲೇ ಮೃತಪಟ್ಟರೆ. ಗಾಯಗೊಂಡ ಶರೀಫ್ ಬೇಪಾರಿ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




