*ಇಂದು ಹಲವು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಇಂದು (ಮಾ.19) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೊತೆಗೆ ಮುಂದಿನ ನಾಲ್ಕು ದಿನಗಳವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿರಲಿದ್ದು ಚದುರಿದಂತೆ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಜೋರಾದ ಮಳೆಯಾಗುವ ಸಾಧ್ಯತೆಯಿದೆ.
ಹಾವೇರಿ, ಧಾರವಾಡ, ಗದಗ, ಚಿತ್ರದುರ್ಗ ಈ ನಾಲ್ಕೂ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯ ನಿರೀಕ್ಷೆಯಿದೆ.
ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಇನ್ನು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗಿದ್ದು ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



