
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಆದರೆ ರಾಅಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದಿಂದ ಜನರು ಕಂಗೆಟ್ಟಿದ್ದರು. ಭಾನುವಾರ ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದು, ಕಾದ ಕಾವಲಿಯಂತಾಗಿದ್ದ ಇಳೆಗೆ ವರುಣ ದೇವ ತಂಪೆರೆದಂತಾಗಿದೆ.
ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದು, ಬಿಸಿಲ ಝಳದಿಂದ ಬಸವಳಿದು ಹೋಗಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ಇಂದೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿ ಮಳೆಯಾಗಲಿದೆ ಎಂದು ತಿಳಿಸಿದೆ.


