Kannada NewsKarnataka NewsNationalPolitics

*ಏಪ್ರಿಲ್ 15ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

 ಅಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಪ್ರೋಟೋಕಾಲ್ ಪ್ರಕಾರ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

Home add -Advt

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭದ್ರತೆ, ಶಿಷ್ಟಾಚಾರ ಮತ್ತು ಸಾರ್ವಜನಿಕ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಯಿತು. ಮಠದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರದ (ಗದ್ದುಗೆ) ಲೋಕಾರ್ಪಣೆ ಹಾಗೂ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಬಳಿಕ ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಧಾನಿ ಹಾಗೂ ಅವರ ಭದ್ರತಾ ಸಿಬ್ಬಂದಿಗಾಗಿ ಒಟ್ಟು 3 ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗುವುದು. ಕಾರ್ಯಕ್ರಮದ ಸ್ಥಳದಲ್ಲಿ ನಿರಂತರ ವಿದ್ಯುತ್ ಸಂಪರ್ಕ, ಗ್ರೀನ್ ರೂಮ್ ಸೌಲಭ್ಯ ಹಾಗೂ ಬಿಎಸ್‌ಎನ್‌ಎಲ್ ವತಿಯಿಂದ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಟೆಲಿಫೋನ್ ಸಂಪರ್ಕ ಕಲ್ಪಿಸಲು ಸೂಚಿಸಲಾಗಿದೆ.

ಸೂಕ್ತ ವಾಹನ ಪಾರ್ಕಿಂಗ್ ವ್ಯವಸ್ಥೆ ರಸ್ತೆ ಗುಂಡಿಗಳ ದುರಸ್ತಿ ಹಾಗೂ ಹೆಲಿಪ್ಯಾಡ್‌ನಿಂದ ಕಾರ್ಯಕ್ರಮದ ಸ್ಥಳದವರೆಗಿನ ಹಾದಿಯನ್ನು ಸ್ವಚ್ಛವಾಗಿಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ವ್ಯವಸ್ಥೆಯು ಹೆಲಿಪ್ಯಾಡ್ ಮತ್ತು ವೇದಿಕೆಯ ಹತ್ತಿರ ಸನ್ನದ್ಧ ಸ್ಥಿತಿಯಲ್ಲಿರಲಿದೆ.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆ‌ರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ. ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವಾನಂದ ಮೂರ್ತಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button