
ಪ್ರಗತಿವಾಹಿನಿ ಸುದ್ದಿ : ಬಸ್ ವೊಂದು ಪಿಕಪ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ಘಟನೆ ಬಿಹಾರನ ಕತಿಹಾರ್‌ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಪಿಕಪ್ ವ್ಯಾನ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ಹಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಪಿಕಪ್ ಟ್ರಕ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪೂರ್ಣಿಯಾ ಜಿಲ್ಲೆಯ ಧಮ್ಹಾಹಾ ನಿವಾಸಿಗಳಾಗಿದ್ದು ದುರಂತ ಸಂಭವಿಸಿದಾಗ ಜಾತ್ರೆಯಿಂದ ಮನೆಗೆ ಮರಳುತ್ತಿದ್ದರು. ಈ ಘಟನೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸದಾನಂದ ಹಸ್ತಾ ಕೂಡ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50,000 ಪರಿಹಾರ ಘೋಷಿಸಿದೆ. ಇನ್ನುಬಿಹಾರ ಸರ್ಕಾರ ಮೃತರ ವಾರಸುದಾರರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಸಹಾಯಧನ ಘೋಷಿಸಿದೆ.


