
ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತದಲ್ಲಿ ಪಿಕಪ್ ಟ್ರಕ್ ಪಲ್ಟಿಯಾಗಿ ಬಿದ್ದು 12 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆ 12 ಜನ ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಘಟನೆ ನಡೆದಿದೆ.
ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಪಿಕಪ್ ಟ್ರಕ್, ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಹಲವು ಬಾರಿ ಪಲ್ಟಿಯಾಗಿದೆ. ಈ ಭೀಕರ ದೃಶ್ಯ ಕಂಡ ಪ್ರತ್ಯಕ್ಷದರ್ಶಿಗಳು ಬೆಚ್ಚಿಬಿದ್ದಿದ್ದಾರೆ. ಮೃತರಲ್ಲಿ ಮಕ್ಕಳೂ ಸೇರಿದ್ದಾರೆ.
ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯರ ಪ್ರಕಾರ, ಸದ್ಯ 13 ಜನರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಈ ಘಟನೆಯ ಕುರಿತು ತೀವ್ರ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.



