Belagavi NewsBelgaum NewsKannada NewsKarnataka NewsLatest

*ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಶುಕ್ರವಾರದಿಂದ ಆಯೋಜಿಸಿರುವ “ಮಾವು ಪ್ರದರ್ಶನ ಮತ್ತು ಮಾರಾಟ ಮೇಳ”ಕ್ಕೆ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಚೇತನಸಿಂಗ್ ರಾಠೋರ್ ಅವರು ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ, ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ರೈತರು ತಮ್ಮ ಮಾವುಗಳನ್ನು ಮಾರಾಟಕ್ಕೆ ಇರಿಸಿದ್ದಾರೆ. ಜೊತೆಗೆ ಮಹಾರಾಷ್ಟ್ರದ ದೇವಗಡ, ಪಂಡರಪುರನಿಂದ ಕೂಡ ರೈತರು ತಮ್ಮ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಆಗಮಿಸಿದ್ದಾರೆ. ಅಲ್ಫಾನ್ಸೋ, ಕೇಸರ್, ಗೋವಾ ಮಂಕೂರ, ಮಲ್ಲಿಕಾ, ಬಿಟ್ಕಿ ಸೇರಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಸಾರ್ವಜನಿಕರು ನೇರವಾಗಿ ಮಾವುಗಳನ್ನು ಖರೀದಿಸುವ ಮೂಲಕ ಮೇಳದ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಮಾವುಗಳ ಪ್ರದರ್ಶನ:

Home add -Advt

ಮಾರಾಟದ ಜೊತೆಗೆ 40 ವಿವಿಧ ತಳಿಯ ಮಾವುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಸಾರ್ವಜನಿಕರು ಇವುಗಳನ್ನು ವೀಕ್ಷಿಸುವುದರ ಜೊತೆಗೆ ವಿವಿಧ ತಳಿಯ ಮಾವಿನ ಹಣ್ಣುಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ. ಮೇ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಮೇಳ ಜರುಗಲಿದೆ ಎಂದು ಮಾಹಿತಿ ನೀಡಿದರು.

ರೈತರು ಸಾವಯವ ಕೃಷಿ ಕೈಗೊಂಡು ಬೆಳೆದ ಮಾವುಗಳನ್ನು ವಿಶೇಷವಾಗಿ ತೋಟಗಾರಿಕಾ ಇಲಾಖೆಯಿಂದ ಗುರುತಿಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮಾರಾಟ ಮಾಡಲು ಅನುಕೂಲವಾಗುತ್ತದೆ. ಜೊತೆಗೆ ಸಾರ್ವಜನಿಕರು ಕೂಡ ಗುಣಮಟ್ಟದ ಮಾವುಗಳನ್ನು ರೈತರಿಂದ ನೇರವಾಗಿ ಕಡಿಮೆ ದರದಲ್ಲಿ (ಡಜನ್ ಗೆ ರೂ. 400 ರಿಂದ ರೂ.700 ರವರೆಗೆ) ಖರೀದಿಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಖರೀದಿ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related Articles

Back to top button