
ಪ್ರಗತಿವಾಹಿನಿ ಸುದ್ದಿ: ಕಾರಿನ ಟೈರ್ ಸ್ಫೋಟಗೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ಹಠಾತ್ತನೆ ಟೈರ್ ಸ್ಫೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಅತೀ ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಐದೂ ಜನ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಚಳ್ಳಕೆರೆ ಮೂಲದವರು ಎಂದು ಗುರುತಿಸಲಾಗಿದೆ. ಚಳ್ಳಕೆರೆಯ ಪ್ರಸಿದ್ಧ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು ಹಾಗೂ ಮಲ್ಲಿಕಾರ್ಜುನ ಮೃತಪಟ್ಟ ದುರ್ದೈವಿಗಳು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಮೊಳಕಾಲ್ಕೂರು ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಜ್ಜುಗುಜ್ಜಾಗಿದ್ದ ಕಾರಿನಿಂದ ಸಾರ್ವಜನಿಕರ ಸಹಾಯದೊಂದಿಗೆ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.



