*ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ೭ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ.
ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.
ಇನ್ನು ಶಿವಮೊಗ್ಗ ಹಾಗೂ ಮಾಂಡ್ಯ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.




