*ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ*

ಮೃಣಾಲ್ ಹೆಬ್ಬಾಳಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ; ರಾಣಿ ಚನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು.
ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕಾರ್ಯಕರ್ತರು ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಸಂಭ್ರಮಿಸಿದರು. ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಸೇರಿದ್ದರು.
ನೇರಪ್ರಸಾರದ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಷಣಕ್ಕೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹರ್ಷೋದ್ಗಾರ ವ್ಯಕ್ತಪಡಿಸಿದರು. “ಡಿಕೆಶಿ ಜಿಂದಾಬಾದ್”, “ಕಾಂಗ್ರೆಸ್ ಪಕ್ಷಕ್ಕೆ ಜಯ” ಎಂಬ ಘೋಷಣೆಗಳು ಕಾಂಗ್ರೆಸ್ ಭವನದ ಆವರಣದಲ್ಲಿ ಮೊಳಗಿದವು.
ಪ್ರಮಾಣವಚನ ಸಮಾರಂಭದ ಬಳಿಕ ಕಾರ್ಯಕರ್ತರು ನಗರದ ಹೃದಯಭಾಗವಾದ ರಾಣಿ ಚನ್ನಮ್ಮ ವೃತ್ತಕ್ಕೆ ತೆರಳಿ ಭರ್ಜರಿ ವಿಜಯೋತ್ಸವ ನಡೆಸಿದರು. ಈ ಸಂದರ್ಭದಲ್ಲಿ ಮೃಣಾಲ್ ಹೆಬ್ಬಾಳಕರ್ ಅವರು ವೀರರಾಣಿ ಚನ್ನಮ್ಮಾಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಹಿ ಹಂಚಿ ಪರಸ್ಪರ ಶುಭಾಶಯ ಕೋರಿದ ಅವರು, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಹಲವರು ನೃತ್ಯ ಮಾಡಿ ಸಂತಸ ವ್ಯಕ್ತಪಡಿಸಿದರು.
ಕಾರ್ಯಕರ್ತರ ಕೈಯಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಭಾವಚಿತ್ರಗಳಿರುವ ಪೋಸ್ಟರ್ಗಳು ಗಮನ ಸೆಳೆದವು. ಕಾಂಗ್ರೆಸ್ ಧ್ವಜಗಳನ್ನು ಹಿಡಿದು ಕಾರ್ಯಕರ್ತರು ಮೆರವಣಿಗೆ ನಡೆಸಿ ವಿಜಯೋತ್ಸವದ ಮೆರುಗು ಹೆಚ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಜನಪರ ಆಡಳಿತ ಮತ್ತಷ್ಟು ಬಲಗೊಳ್ಳಲಿದ್ದು, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಹೊಸ ದಿಕ್ಕು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆದ ಈ ವಿಜಯೋತ್ಸವ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಪ್ರತಿಬಿಂಬಿಸುವಂತಿತ್ತು.



