*ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂ. 11ರವರೆಗೆ ‘ರೆಡ್ ಅಲರ್ಟ್’ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು ಜೂನ್ 11ರವರೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 20 ಸೆಂ.ಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಹಾಗೂ ಗುಡ್ಡಗಾಡು ವಲಯದಲ್ಲಿ ಭೂಕುಸಿತದ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು ಗಾಳಿಯ ವೇಗ ಹೆಚ್ಚಿರಲಿದೆ.
ಮಳೆಯ ಆರ್ಭಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚನೆ ನೀಡಲಾಗಿದೆ. ಕಡಲು ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.




