*ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂದಿನ 3 ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಮತ್ತೆ ಮಳೆ ಚುರುಕುಗೊಳ್ಳಲಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಕರಾವಳಿ, ಮಲೆನಾಡು ಭಾಗ ಮಾತ್ರವಲ್ಲದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ವರುಣನ ಸಿಂಚನವಾಗಲಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 13ರಿಂದ 15ರವರೆಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಗುಡುಗಿನೊಂದಿಗೆ ಮಳೆ ಸುರಿಯುವ ಸಾಧ್ಯತೆಯಿದ್ದು ಕಚೇರಿಗಳಿಂದ ಮನೆಗೆ ಮರಳುವ ಸವಾರರು ಎಚ್ಚರಿಕೆ ವಹಿಸಬೇಕಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆ ಹೊರಡಿಸುವ ಅಧಿಕೃತ ಮಾಹಿತಿಯನ್ನು ಸದಾ ಗಮನಿಸುತ್ತಿರಬೇಕು. ಸಿಡಿಲು ಮತ್ತು ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲಬಾರದು ಹಾಗೂ ಅಗತ್ಯವಿಲ್ಲದಿದ್ದರೆ ಹೊರಾಂಗಣ ಪ್ರಯಾಣವನ್ನು ಮುಂದೂಡುವುದು ಒಳಿತು ಎಂದು ತಜ್ಞರು ಸಲಹೆ ನೀಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಿರಬೇಕು ಎಂದು ಎಚ್ಚರಿಕೆ ನೀಡಲಾಗಿದೆ.




