*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸರಣಿ ಚಾಲನೆ: ರಸ್ತೆ, ಚರಂಡಿ, ಸೇತುವೆ ಹಾಗೂ ದೇವಸ್ಥಾನ ನಿರ್ಮಾಣಕ್ಕೆ ಉತ್ತೇಜನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸೇತುವೆ ಹಾಗೂ ಧಾರ್ಮಿಕ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಜೊತೆಗೆ ದೇವಸ್ಥಾನ ನಿರ್ಮಾಣಕ್ಕಾಗಿ ಅನುದಾನದ ಚೆಕ್ನ್ನೂ ಹಸ್ತಾಂತರಿಸಿದರು.
ಮೊದಲಿಗೆ ಬಡಸ್ ಗ್ರಾಮದಿಂದ ಬೀದರಗಡ್ಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸುಮಾರು 1.12 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಗ್ರಾಮೀಣ ಜನರ ಸಂಚಾರ, ಕೃಷಿ ಉತ್ಪನ್ನಗಳ ಸಾಗಣೆ ಹಾಗೂ ಸ್ಥಳೀಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಅವರು ಸೂಚನೆ ನೀಡಿದರು.
ಇದಾದ ಬಳಿಕ ಬೆಂಡಿಗೇರಿ ಗ್ರಾಮದಲ್ಲಿ ಸುಮಾರು 1.05 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಉತ್ತಮ ರಸ್ತೆ ಮತ್ತು ಸಮರ್ಪಕ ಚರಂಡಿ ವ್ಯವಸ್ಥೆಯಿಂದ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.
ನಂತರ ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಕಟ್ಟಡ ಕಾಮಗಾರಿಗಾಗಿ ಮೂರನೇ ಕಂತಿನ 20 ಲಕ್ಷ ರೂ.ಗಳ ಚೆಕ್ ಅನ್ನು ಲಕ್ಷ್ಮೀ ಹೆಬ್ಬಾಳಕರ್ ಹಸ್ತಾಂತರಿಸಿದರು.

ಗ್ರಾಮದ ತೋಂಟದಾರ್ಯ ವಿರಕ್ತ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಕೇಂದ್ರವಾಗುವುದರ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ತಾಯಂದಿರು, ಭಕ್ತರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಾದ ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರಿಕಟ್ಟಿ, ಮಾವಿನಕಟ್ಟಿ ಹಾಗೂ ಹೊನ್ನಿಹಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ (ಬಾಕ್ಸ್ ಕಲ್ವರ್ಟ್) ನಿರ್ಮಾಣ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮಳೆಗಾಲದಲ್ಲಿಯೂ ಗ್ರಾಮಗಳ ನಡುವಿನ ಸಂಪರ್ಕ ಸುಗಮವಾಗುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ರಸ್ತೆ, ಚರಂಡಿ, ಸೇತುವೆ, ಧಾರ್ಮಿಕ ಕೇಂದ್ರಗಳು ಸೇರಿದಂತೆ ಎಲ್ಲ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
“ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ಸೌಲಭ್ಯಗಳನ್ನು ತಲುಪಿಸುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಸಂಕಲ್ಪ ಹೊಂದಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಆಶೀರ್ವಾದ ಅತ್ಯಗತ್ಯ,” ಎಂದು ಅವರು ಹೇಳಿದರು.
ಇಂದಿನ ಕಾರ್ಯಕ್ರಮಗಳಲ್ಲಿ ವಿವಿಧ ಗ್ರಾಮಗಳ ಹಿರಿಯರು, ಸಾರ್ವಜನಿಕರು, ತಾಯಂದಿರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಶುಭ ಹಾರೈಸಿದರು.



