Belagavi NewsBelgaum NewsKarnataka NewsLatestPolitics

*ಮಾರಿಹಾಳದಲ್ಲಿ ದೇವಾಂಗ ಸಮಾಜದ ಕಲ್ಯಾಣ ಮಂಟಪ ಕಾಮಗಾರಿ ಪರಿಶೀಲನೆ: ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಮಾರಿಹಾಳ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ದೇವಾಂಗ ಸಮಾಜದ ಕಲ್ಯಾಣ ಮಂಟಪದ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

Home add -Advt

ಕಲ್ಯಾಣ ಮಂಟಪ ನಿರ್ಮಾಣವು ದೇವಾಂಗ ಸಮಾಜದ ಬಹುಕಾಲದ ಕನಸಾಗಿದ್ದು, ಈ ಕಟ್ಟಡ ಪೂರ್ಣಗೊಂಡ ಬಳಿಕ ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲಕರ ವೇದಿಕೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಅವರು ಸಂಬಂಧಪಟ್ಟವರೊಂದಿಗೆ ಚರ್ಚಿಸಿದರು.

ಭೇಟಿಯ ವೇಳೆ ದೇವಾಂಗ ಸಮಾಜದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಈ ಭಾಗದ ಪಕ್ಷದ ಪ್ರಮುಖರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್, ಕಲ್ಯಾಣ ಮಂಟಪದ ಕಾಮಗಾರಿಯ ಪ್ರಗತಿ, ಅಗತ್ಯ ಮೂಲಸೌಕರ್ಯಗಳ ಕಲ್ಪನೆ ಹಾಗೂ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಮಾರಿಹಾಳ ಗ್ರಾಮದ ಇತರೆ ಪ್ರಮುಖ ಅಭಿವೃದ್ಧಿ ಕೆಲಸಗಳ ಬಗ್ಗೆಯೂ ಚರ್ಚೆ ನಡೆಯಿತು. ಗ್ರಾಮದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸಮುದಾಯ ಸೌಲಭ್ಯಗಳು ಸೇರಿದಂತೆ ಜನರಿಗೆ ಅಗತ್ಯವಾಗಿರುವ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯರು ತಮ್ಮ ಬೇಡಿಕೆಗಳು ಮತ್ತು ಸಲಹೆಗಳನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಲಾಗುತ್ತಿದ್ದು, ಜನರ ಅಗತ್ಯಗಳಿಗೆ ಸ್ಪಂದಿಸುವ ಕೆಲಸಗಳನ್ನು ನಿರಂತರವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

“ಗ್ರಾಮಗಳ ಅಭಿವೃದ್ಧಿಯೇ ಕ್ಷೇತ್ರದ ಅಭಿವೃದ್ಧಿಗೆ ಅಡಿಪಾಯವಾಗಿದೆ. ಸಮಾಜದ ವಿವಿಧ ವರ್ಗಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ಸೌಹಾರ್ದತೆ ಮತ್ತು ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ನಮ್ಮದಾಗಿದೆ. ಜನರ ಸಹಕಾರದೊಂದಿಗೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೊಳಿಸಲಾಗುವುದು,” ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ದೇವಾಂಗ ಸಮಾಜದ ಹಿರಿಯರು, ಗ್ರಾಮದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button