
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕು ಪಡೆದುಕೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜುಲೈ 6 ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅತ್ಯಂತ ಚುರುಕಾಗಿದ್ದು, ವ್ಯಾಪಕ ಮಳೆಯಾಗುತ್ತಿದೆ. ಉಡುಪಿಯ ಸಿದ್ದಾಪುರ ಹಾಗೂ ಕಾರವಾರದಲ್ಲಿ ಗರಿಷ್ಠ 12 ಸೆಮೀ ಭಾರಿ ಮಳೆ ದಾಖಲಾಗಿದೆ. ಇನ್ನು ಮಲೆನಾಡಿನ ಶಿವಮೊಗ್ಗ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದ್ದು ಭಾರಿ ಗಾಳಿ ಸಹಿತ ಮಳೆಯಾಗುತ್ತಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ ಹಾಗೂ ಶೃಂಗೇರಿಯಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು ಕೊಡಗಿನಲ್ಲಿ ಸದ್ಯ ಸಾಧಾರಣ ಮಳೆಯ ವಾತಾವರಣವಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿಯ ಲೋಂಡಾ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಸಾಧಾರಣ ಮಳೆಯಾಗಿದೆ. ಇದರೊಂದಿಗೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ವೇಳೆ ತಂಪಾದ ಗಾಳಿ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಇನ್ನುಳಿದಂತೆ ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುತ್ತಿದ್ದು ಮುಂಬರುವ ದಿನಗಳಲ್ಲಿ ಈ ಭಾಗದಲ್ಲೂ ಮುಂಗಾರು ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ.




