*ರಾಜ್ಯ ಹಲವು ಭಾಗದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ ಕೆಲ ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜುಲೈ 6 ಮತ್ತು 7 ರಂದು ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳುರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎನ್ನಲಾಗಿದೆ.
ರಾಜ್ಯದ ಇತರ ಭಾಗಗಳಲ್ಲೂ ಮಳೆಯ ವಾತಾವರಣ ನಿರ್ಮಾಣವಾಗಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇದರೊಂದಿಗೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು, ರಾಮನಗರು, ತುಮಕೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಜುಲೈ 5 ರಿಂದ ಜುಲೈ 9 ರವರೆಗಿನ ಅವಧಿಯಲ್ಲಿ ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಭೀತಿ ಇದ್ದು ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗ್ರತೆ ವಹಿಸುವಂತೆ ಇಲಾಖೆ ಎಚ್ಚರಿಸಿದೆ.



