*300 ಕೋಟಿ ಟೆಂಡರ್ ಗೋಲ್ಮಾಲ್ ಆರೋಪ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಗೆ ಮುತ್ತಿಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಪಾಲಿಕೆ ವತಿಯಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಬಾಹಿರವಾಗಿ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ. 300 ಕೋಟಿ ರೂಪಾಯಿ ಟೆಂಡರ್ ಗೋಲ್ಮಾಲ್ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಜಾಜಿನಗರದ ಆರ್‌ಟಿಒ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ NSUI ಯೂತ್ ಕಾಂಗ್ರೆಸ್‌ನ ಕಾರ್ಯಕರ್ತರು, ಶಾಸಕರಿಗೆ ಮುತ್ತಿಗೆಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಭಾರೀ ಹೈಡ್ರಾಮಾವೇ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರ್‌ಟಿಒ ರಸ್ತೆ ಬಂದ್ ಮಾಡಿದ್ದಾರೆ. ರಸ್ತೆಯ ಎರಡು ಬದಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿಸಿದ್ದಾರೆ. ಜೊತೆಗೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದ ಕಚೇರಿ ಮುಂಭಾಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.
ಶಾಸಕ ಸುರೇಶ್ ಕುಮಾರ್ ವಿರುದ್ಧ ಧಿಕ್ಕಾರ ಕೂಗುತ್ತಲೇ ಆರ್‌ಟಿಒ ಕಚೇರಿ ಬಳಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಆರ್‌ಟಿಒ ಕಚೇರಿ ಒಳನುಗ್ಗಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಅಷ್ಟರಲ್ಲಿ ಬ್ಯಾರಿಕೇಡ್ ಅಳವಡಿಸಿದ್ದ ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರನ್ನ ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗದುಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಸುರೇಶ್ ಕುಮಾರ್, ನನ್ನ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ವಿಚಾರಣೆಗೆ ಕರೆದ್ರೆ ಹೋಗ್ತೇನೆ. ಉದ್ದೇಶಪೂರ್ವಕವಾಗಿ ಪ್ರತಿಭಟನೆ ಮಾಡ್ತಿದ್ದಾರೆ. ಜನಸ್ಪಂದನ ಕಾರ್ಯಕ್ರಮವನ್ನ ಹಾಳು ಮಾಡಲು ಬಂದಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆದ್ಮೇಲೆ ಈ ರೀತಿಯ ಮನಸ್ಥಿತಿಗಳು ಹೆಚ್ಚಾಗ್ತಿವೆ. ಇದು ಸರಿಯಲ್ಲ, ಕಾಂಗ್ರೆಸ್ ಪಕ್ಷಕ್ಕೆ ಇದು ಒಳ್ಳೆಯದಲ್ಲ ಎಂದು ಹೇಳಲು ಬಯಸುತ್ತೇನೆ ಎಂದು ಕಿಡಿಕಾರಿದ್ದಾರೆ.



