*ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಪರಾರಿಯಾದ ದುಷ್ಕರ್ಮಿ*

ಪ್ರಗತಿವಾಹಿನಿ ಸುದ್ದಿ: ಬಸ್ ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಸಮೀಪದ ಮೋಂತಿಮಾರು ಪಡ್ಪು ಎಂಬಲ್ಲಿ ಈ ಘಟನೆ ನಡೆದಿದೆ. ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್(28) ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಆರೋಪಿ.
ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದ ಆರೋಪಿ ವಿದ್ಯಾರ್ಥಿನಿ ಬಸ್ಸಿಗಾಗಿ ಬಸ್ ತಂಗುದಾಣದಲ್ಲಿ ಕಾಯುತ್ತಿದ್ದ ವೇಳೆ ಏಕಾಏಕಿ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಈ ಸಂದರ್ಭದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇತರ ಪ್ರಯಾಣಿಕರು ಜೋರಾಗಿ ಕಿರುಚಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಆರೋಪಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.



