Kannada NewsKarnataka NewsNationalPoliticsTravel

*ಯಲ್ಲಾಪುರದ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: 6 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ಅರಬೈಲ್ ಘಾಟ್‌ನ ಬಳಗಾರ್ ಬಳಿ ಇಂದು ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಆರು ಜನ ಪ್ರಯಾಣಿಕರು ಸ್ಥಳದಲ್ಲೆ ಭೀಕರವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಈ ಘಟನೆ ಸಂಭವಿಸಿದೆ.

Home add -Advt

ಪ್ರವಾಸಿಗರು ಪ್ರಯಾಣಿಸುತ್ತಿದ್ದ ತೂಫಾನ್ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೊಳಗಾದ ವಾಹನದಲ್ಲಿ ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 

ಬುಧವಾರ (ಜು.8) ರಾತ್ರಿ ಇವರೆಲ್ಲರೂ ಸೇರಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆಂದು ಟೂರ್ ಹೊರಟಿದ್ದರು. ಆದರೆ, ಅರಬೈಲ್ ಘಟ್ಟದ ಬಳಗಾರ್ ತಲುಪುತ್ತಿದ್ದಂತೆ ಎದುರಿನಿಂದ ಬಂದ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ನಡೆದಿದೆ. 

ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಭೀಕರತೆಗೆ ಕ್ರೂಸರ್‌ನಲ್ಲಿದ್ದ ಆರು ಸಾವನ್ನಪ್ಪಿದ್ದಾರೆ, 

ಮೃತರನ್ನು ಬಸವರಾಜ್ (48 ವರ್ಷ), ಅಭಿಷೇಕ್ ಈಶ್ವರ್ (28 ವರ್ಷ), ಅಕ್ಷಯ (26 ವರ್ಷ), ಅಭಿಷೇಕ್ (26 ವರ್ಷ), ಸಂಜೀವ, ಸಂಜಯ ಅಂಗಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಒಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರು ಎಳೆದಿದ್ದಾರೆ. 

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗಾಯಳುಗಳನ್ನು ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ಮಂಜುನಾಥ್ ಅಶೋಕ್ ಚುಲಕಿ (32 ವರ್ಷ), ಸಚಿನ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. 

Related Articles

Back to top button