ಪ್ರಗತಿವಾಹಿನಿ ಸುದ್ದಿ, ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮುಂಗಡ ಪತ್ರ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯಮ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಉತ್ತಮ ಕೊಡುಗೆ ನೀಡಿದೆ. ದೇಶದ ಜನಸಾಮಾನ್ಯರ ಹಿತದೃಷ್ಟಿಯಿಂದ ಮಂಡಿಸಲಾದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಎಲ್ಲ ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅವರು ಹೇಳಿದ್ದಾರೆ.
ಬಜೆಟ್‌ನಲ್ಲಿ ಘೋಷಿಸಲಾಗಿರುವ ಯೋಜನೆಗಳು ದೂರದೃಷ್ಟಿಯನ್ನು ಹೊಂದಿವೆ. ಅನ್ನದಾತನನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿರುವ ಈ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಜೊತೆಗೆ ಸ್ವಾವಲಂಬನೆಗೆ ಉತ್ತೇಜನ ನೀಡಲಾಗಿದೆ. ಜೊತೆಗೆ ಆದಾಯ ತೆರಿಗೆ ಘೋಷಿಸುವ ಮೂಲಕ ಮಧ್ಯಮ ವರ್ಗದವರಿಗೆ ಬಂಪರ್ ಆಫರ್ ನೀಡಲಾಗಿದೆ. ರೈತರು, ಬಡವರು, ಗ್ರಾಮೀಣ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ರೈತನ ಆದಾಯ ಹೆಚ್ಚಳಕ್ಕೆ ಕ್ರಮ, ರೈತರ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ಅನುಕೂಲ ಕಲ್ಪಿಸಲಾಗಿದೆ. ಆಯುಷ್ಮಾನ್ ಭಾರತ ಯೋಜನೆಗೂ ವಿಶೇಷ ಒತ್ತು ನೀಡಲಾಗಿದೆ ಎಂದಿರುವ ಅವರು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿ, ಬಜೆಟ್‌ನ್ನು ಸ್ವಾಗತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ