Karnataka NewsLatestPolitics

*ಎಂ.ಕೆ ಪ್ರಾಣೇಶ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ; ಪರಿಷತ್ ಸದಸ್ಯತ್ವ ರದ್ದು*

ಪ್ರಗತಿವಾಹಿನಿ ಸುದ್ದಿ:ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.

ಎಂ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಿದೆ.

ಈ ಪ್ರಕರಣದ ಕೇಂದ್ರಬಿಂದುವಾಗಿದ್ದದ್ದು ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ಪ್ರಶ್ನೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದಾಗಿದೆ.

Home add -Advt

2021ರ ಡಿಸೆಂಬರ್​​ನಲ್ಲಿ ಚಿಕ್ಕಮಗಳೂರಿನಿಂದ ಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ 2410 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ ಪರ 1,188 ಮತ ಚಲಾವಣೆಯಾಗಿದ್ದರೆ, ಗಾಯತ್ರಿ ಶಾಂತೇಗೌಡ ಪರ 1,182 ಮತ ಚಲಾವಣೆಯಾಗಿದ್ದವು. 12 ಮಂದಿ ನಾಮನಿರ್ದೇಶಿತ ಸದಸ್ಯರು ಕೂಡ ಆ ಚುನಾವಣೆಯಲ್ಲಿ ಮತಚಲಾಯಿಸಿದ್ದರು. ಈ ಮತಗಳನ್ನು ಪರಿಗಣಿಸಿರುವ ಕ್ರಮವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ನಾಮನಿರ್ದೇಶಿತ ಸದಸ್ಯರ ಮತಗಳನ್ನು ಪ್ರತ್ಯೇಕಿಸಿ ಮರು ಮತಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚಿಸಿತ್ತು.

ನಂತರ ಈ ಆದೇಶವನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ವೇಳೆ, ಚುನಾವಣಾ ಆಯೋಗದಿಂದ ಮಾಹಿತಿ ಪಡೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮರು ಮತಎಣಿಕೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ನಿರ್ದೇಶಿಸಿತ್ತು. ಇದೀಗ ಅಂತಿಮವಾಗಿ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್, ಪ್ರಾಣೇಶ್ ಅವರ ಅರ್ಜಿಯನ್ನು ವಜಾಗೊಳಿಸಿದೆ.

Related Articles

Back to top button