Kannada NewsLatestNational

*ಜಿಬಿಎ ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಡಿಸೆಂಬರ್‌ 31ರ ಒಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಚುನಾವಣೆ ಮುಂದೂಡಲು ಅವಕಾಶ ನೀಡಬೇಕೆಂಬ ಸರ್ಕಾರದ ಮನವಿಯ ಅರ್ಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. SIR ಪ್ರಕ್ರಿಯೆ ನಡೆಯುತ್ತಿರುವ ಕಾರಣ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವುದು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ಸರ್ಕಾರದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಡಿಸೆಂಬರ್ 31ರ ಒಳಗೆ ಚುನಾವಣೆ ನಡೆಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಿದೆ. ಜೊತೆಗೆ, ಡಿಸೆಂಬರ್‌ನಲ್ಲಿ ಮತ್ತೊಂದು ಕಾರಣ ನೀಡಿ ಚುನಾವಣೆ ಮುಂದೂಡುವಂತೆ ಮನವಿ ಮಾಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಮುಂದೆ ಮತ್ತೊಮ್ಮೆ ಮುಂದೂಡಿಕೆಗೆ ಮನವಿ ಮಾಡುವ ಪರಿಸ್ಥಿತಿ ಬಂದರೆ ಸರ್ಕಾರದ ಪರ ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಮೊದಲು ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ಗಡುವು ನೀಡಿತ್ತು.

Home add -Advt

Related Articles

Back to top button