Kannada NewsKarnataka NewsLatestPolitics

*ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಮಾಲೋಚನೆ*

ಸಚಿವ ಸಂಪುಟ ವಿಸ್ತರಣೆ ಕುರಿತು ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸಮಾಲೋಚನೆ

ಪ್ರಗತಿವಾಹಿನಿ ಸುದ್ದಿ/
ಬೆಂಗಳೂರು :
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕೂಡ ಉಪಸ್ಥಿತರಿದ್ದರು. ರಾಜ್ಯದ ರಾಜಕೀಯ ಬೆಳವಣಿಗೆಗಳು, ಸಚಿವ ಸಂಪುಟ ವಿಸ್ತರಣೆ, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆದಿರುವುದು ತಿಳಿದುಬಂದಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ, ಪಕ್ಷ ಸಂಘಟನೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತಂತೆ ಸುದೀರ್ಘ ಚರ್ಚೆ ನಡೆಸಿ ಅವರು ಬೆಂಗಳೂರಿಗೆ ಮರಳಿದ್ದಾರೆ.
ದೆಹಲಿಯಲ್ಲಿ ನಡೆದ ಸಮಾಲೋಚನೆಯ ಮುಂದುವರಿದ ಭಾಗವಾಗಿ ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮತೋಲನ ಕಾಪಾಡುವ ಉದ್ದೇಶದಿಂದ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ನಿರಂತರ ಸಮಾಲೋಚನೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Home add -Advt

Related Articles

Back to top button