
ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ದೇಶಾದ್ಯಂತ ಯುವಜನತೆಯೊಂದಿಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ಆರಂಭಿಸಿದೆ.
ಕಾಂಗ್ರೆಸ್ ಪ್ರತಿಭಟನೆ ವಿರೋಧಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅದೇ ರೀತಿ ಬೆಂಗಳೂರಿನಲ್ಲಿಯೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ನಿಟ್ಟಿನಲ್ಲಿ ಕಂಟೋನ್ಮೆಂಟ್ ಬಳಿ ಧರಣಿ ಬಳಿಕ ಕೆಪಿಸಿಸಿ ಕಚೇರಿಯತ್ತ ಸಾಗುತ್ತಿದ್ದ ಬಿಜೆಪಿ ನಾಯಕರನ್ನು ಪೊಲಿಸರು ತಡೆದಿದ್ದಾರೆ.
ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಲೆಂದು ಬಂದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಕಾರಿನಲ್ಲಿ ಕೆಪಿಸಿಸಿ ಕಚೇರಿ ಬಳಿ ಬಂದಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆದಿದ್ದಾರೆ. ಮೊಟ್ಟೆ ಬಿದ್ದ ರಭಸಕ್ಕೆ ಶಾಸಕರ ತಲೆಯಲ್ಲಿ ಸಿಲುಕಿದೆ.
ಶಾಸಕರನ್ನು ಕಾಂಗ್ರೆಸ್ ಕಾರ್ಯಕರ್ತರು ಬೆನ್ನಟ್ಟುತ್ತಿದ್ದಂತೆ ತಕ್ಷಣ ಧಾವಿಸಿ ಬಂದ ಪೊಲೀಸರು ಶಾಸಕರನ್ನು ರಕ್ಷಿಸಿ ಕರೆದೊಯ್ದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವರ್ತನೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



