*ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿಯ ಬಗ್ಗೆ ಯತೀಂದ್ರ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿಯ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನನ್ನ ತಂದೆ ಸಿದ್ದರಾಮಯ್ಯ ಅವರು 2028ಕ್ಕೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲಿದ್ದಾರೆ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲ ಮತ್ತು ಶೋಷಿತ ವರ್ಗಗಳ ಪರವಾಗಿ ನಿಲ್ಲಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಂದೆಯವರು ಈ ಮಾತನ್ನು ಹೊಸದಾಗಿ ಹೇಳಿಲ್ಲ. ಈ ಹಿಂದೆಯೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಮಯದಲ್ಲೇ 2028ರ ನಂತರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ ಸಕ್ರಿಯವಾಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಸಚಿವರು, ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಮುಖ್ಯಮಂತ್ರಿಗಳು, ಸಿದ್ದರಾಮಯ್ಯನವರು ಹಾಗೂ ಇತರ ಹಿರಿಯ ನಾಯಕರನ್ನು ದೆಹಲಿಗೆ ಕರೆದಿದ್ದಾರೆ. ಇಂದು ಈ ವಿಷಯವಾಗಿ ವಿಸ್ತ್ರತ ಚರ್ಚೆ ನಡೆಯಲಿದ್ದು ಮಾತುಕತೆಯ ನಂತರ ಸಂಪುಟ ವಿಸ್ತರಣೆ ಪ್ರಕ್ರಿಯೆಯು ಅಂತಿಮಗೊಳ್ಳಲಿದೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆಗೆ ಸರ್ಕಾರದಿಂದ ಬರಬೇಕಿದ್ದ 100 ಕೋಟಿ ರೂಪಾಯಿ ಅನುದಾನದ ಕುರಿತು ಪ್ರತಿಕ್ರಿಯಿಸಿ, ಈ ಹಿಂದೆ ಯಾವ ಮಾದರಿಯಲ್ಲಿ ಹಣ ಬಿಡುಗಡೆಯಾಗುತ್ತಿತ್ತು ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಅಲ್ಲದೆ, ಎಲ್ ಆಂಡ್ ಟಿ ಸಂಸ್ಥೆಯವರು ಕುಡಿಯುವ ನೀರಿನ ಕಾಮಗಾರಿಗೆ ರಸ್ತೆಗಳನ್ನು ಅಗೆದು ಹಾಗೆಯೇ ಬಿಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾಮಗಾರಿ ಮುಗಿದ ತಕ್ಷಣ ರಸ್ತೆ ದುರಸ್ತಿ ಮಾಡುವುದು ಕಂಪನಿಯ ಕರ್ತವ್ಯವಾಗಿದ್ದು, ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರು ಸಚಿವರನ್ನು ಭೇಟಿ ಮಾಡಿ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂದು ಅಧಿಕೃತವಾಗಿ ಗೊತ್ತುವಳಿ ಅಂಗೀಕರಿಸಬೇಕು, ಇಲ್ಲದಿದ್ದರೆ ಪಾಲಿಕೆಯನ್ನು ಸೂಪರ್ ಸೀಡ್ (ರದ್ದು) ಮಾಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಹೋರಾಟಗಾರರ ಮನವಿಗೆ ಸ್ಪಂದಿಸಿದ ಸಚಿವ ಯತೀಂದ್ರ, ಬೆಳಗಾವಿ ಎಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದು ಸ್ಪಷ್ಟ. ಈ ಕುರಿತು ನೀಡಲಾದ ಪತ್ರ ಕಾರ್ಯದರ್ಶಿಗಳ ಹಂತದಲ್ಲಿದ್ದು, ಸಂಪೂರ್ಣ ಮಾಹಿತಿ ಪಡೆದು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಲ್ಲದೆ, ಪಾಲಿಕೆಯಲ್ಲಿ ಗೊತ್ತುವಳಿ ಪಾಸ್ ಮಾಡುವ ವಿಚಾರದಲ್ಲಿ ತಮ್ಮ ಮೇಲೆ ಯಾವುದೇ ರಾಜಕೀಯ ಒತ್ತಡಗಳಿಲ್ಲ ಎಂದು ಸ್ಪಷ್ಟಪಡಿಸಿದರು.


