
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ಘೋಷಿಸಿದೆ.
ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಇದರೊಂದಿಗೆ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ನಾಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ತುಸು ತಗ್ಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



