*ಕೃಷ್ಣಾ ನದಿ ಪ್ರವಾಹಕ್ಕೆ ಕುಡಚಿ ಸೇತುವೆ ಮುಳುಗಡೆ; ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಬಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸೇತುವೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಈ ಸೇತುವೆಯು ಮುಳುಗಡೆಯಾದ್ದರಿಂದ, ಕುಡಚಿ ಮತ್ತು ಉಗಾರಖುರ್ದ್ ನಡುವಿನ ವಾಹನ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ.
ಪ್ರತಿದಿನ ನೂರಾರು ಸಾರಿಗೆ ಬಸ್‌ಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುವ ಈ ಪ್ರಮುಖ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕುಡಚಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ವಾಹನ ಸಂಚಾರಕ್ಕೆ ಕಟ್ಟುನಿಟ್ಟಿನ ತಡೆ ಒಡ್ಡಿದ್ದಾರೆ. ಪ್ರಸ್ತುತ ಈ ಮಾರ್ಗದಲ್ಲಿ ಪ್ರಯಾಣಿಸುವ ಸವಾರರು ಪರ್ಯಾಯ ರಸ್ತೆಯಾಗಿ ಸುಮಾರು 50 ಕಿಲೋಮೀಟರ್ ಹೆಚ್ಚುವರಿ ಸುತ್ತುವರೆದು ಸಂಚರಿಸಬೇಕಾದ ಪರಿಸ್ಥಿತಿ ಇದೆ.



