
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಆಗಸ್ಟ್ 9ರವರೆಗೆ ಕರಾವಳಿ ಹಾಗೂ ಮಲೆನಾಡಿನ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಜೊತೆಗೆ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯನ್ನೂ ಇಲಾಖೆ ತಿಳಿಸಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣದ ನಡುವೆ ಅಲ್ಲಲ್ಲಿ ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಾತ್ರ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಆಗಸ್ಟ್ 10ರ ನಂತರ ಮಳೆಯ ಪ್ರಮಾಣ ಇಳಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ತುಂತುರು ಮಳೆ ಸುರಿಯಬಹುದು ಎಂದು ಇಲಾಖೆ ಹೇಳಿದೆ. ಈ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.



