Belagavi NewsBelgaum NewsKannada NewsKarnataka NewsPolitics

*ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಸೋನಿಯಾ ಗಾಂಧಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಆಲ್ ಇಂಡಿಯಾ ದಲಿತ ಯೂತ್ ಆರ್ಗನೈಸೇಷನ್ (ರಿ.), ನವದೆಹಲಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಲ್ಲೇಶ್ ಜಿ. ಚೌಗುಲೆ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜಕೀಯ ಅನುಭವ, ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ಸಮಾಜಮುಖಿ ಸೇವೆಯನ್ನು ಉಲ್ಲೇಖಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸಲಾಗಿದೆ.

Home add -Advt

ಮನವಿಯಲ್ಲಿ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿಯೂ ಪಕ್ಷ ಸಂಘಟನೆಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಹಿಂದಿನ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಜಾರಿಗೆ ತಂದ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಮನವಿಯಲ್ಲಿ ಪ್ರಶಂಸಿಸಲಾಗಿದೆ. ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರು ವಿಶೇಷ ಆದ್ಯತೆ ನೀಡಿ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

“ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವುದರಿಂದ ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಬಲ ಸಿಗುವುದರ ಜೊತೆಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತಷ್ಟು ಸದೃಢವಾಗಲಿದೆ” ಎಂದು ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಲ್ಲೇಶ್ ಜಿ. ಚೌಗುಲೆ ತಿಳಿಸಿದ್ದಾರೆ.

ಈ ಮನವಿಯ ಪ್ರತಿಗಳನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೂ ಕಳುಹಿಸಲಾಗಿದೆ.

Related Articles

Back to top button