*ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಸಮರ್ಪಕವಾಗಿ ನೀರು ಬಿಡುಗಡೆ ಮಾಡಲಾಗುವುದು ಎಂದರು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ, ಜಲಾಶಯದ ನೀರಿನ ಸಂಗ್ರಹ ಮಟ್ಟ ಹಾಗೂ ಹವಾಮಾನ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ಮಳೆಯ ಪ್ರಮಾಣದಲ್ಲಿ ಏರಿಳಿತ ಉಂಟಾದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನೀರು ಬಿಡುಗಡೆ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರೈತರು ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ವೈಜ್ಞಾನಿಕವಾಗಿ ಬಳಸಿಕೊಂಡು ನೀರಿನ ಸಂರಕ್ಷಣೆಗೆ ಸಹಕರಿಸಬೇಕು. ಮಳೆ ಕೊರತೆಯಾದಲ್ಲಿ ನೀರಿನ ಸಮರ್ಪಕ ಬಳಕೆ, ಪರ್ಯಾಯ ನೀರಿನ ಮೂಲಗಳ ಸದ್ಬಳಕೆ ಹಾಗೂ ಅಗತ್ಯವಿರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ರೈತ ಮುಖಂಡರೊಬ್ಬರು ಮಾತನಾಡಿ ನಿಯಮಾನುಸಾರವಾಗಿ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆ ಮಾಡಿ ಕೃಷಿ ಅನುಕೂಲಕ್ಕಾಗಿ ಅಗತ್ಯಕ್ಕೆ ತಕ್ಕಂತೆ ನೀರು ಬಿಡುಗಡೆ ಮಾಡಬೇಕು. ಇನ್ನಷ್ಟು ಹೊಸ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ರೈತರ ಕೃಷಿ ಚಟುವಟಿಗೆಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಇನ್ನೋರ್ವ ರೈತ ಮುಖಂಡರು ಮಾತನಾಡಿ ಹನಿ ನೀರಾವರಿ ಯೋಜನೆಯಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ನೈಸರ್ಗಿಕವಾಗಿ ಕೆರೆಗಳನ್ನು ತುಂಬುವ ಕೆಲಸಕ್ಕೆ ಸಂಬಂಧಿಸಿದ ಇಲಾಖೆ ಮಾಡಬೇಕು. ಈ ವರ್ಷ ವಾಡಿಕೆಯಷ್ಟು ಮಳೆಯಾಗದೆ ಇರುವ ಕಾರಣ ಕೃಷಿಗೆ ನೀರು ಮತ್ತು ಸಮರ್ಪಕವಾಗಿ ಕುಡಿಯುವ ನೀರು ಪೂರೈಸಿ ರೈತಾಪಿ ವರ್ಗದ ಕೈ ಹಿಡಿಯಬೇಕು ಎಂದು ಮನವಿ ಮಾಡಿಕೊಂಡರು.
ರಾಮದುರ್ಗ ಶಾಸಕರು ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ನವಲಗುಂದ ಶಾಸಕ ಎಚ್.ಎಸ್. ಕೋನರೆಡ್ಡಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತಿದ್ದರು.




