*ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಮೂರು ದಿಕ್ಕಿನ ಮೂಲಕವಾಗಿ ಮೂರು ಪ್ರತ್ಯೇಕ ತಂಡಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಬಿಜೆಪಿಯ ಮೂರು ಪ್ರತ್ಯೇಕ ತಂಡಗಳು ಪ್ರತಿಭಟನೆ ನಡೆಸುತ್ತಿದ್ದು, ಒಂದು ತಂಡ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಎರಡು ಪ್ರತ್ಯೇಕ ತಂಡಗಳು ವಿಧಾನಸೌಧದತ್ತ ಮೆರವಣಿಗೆ ಮೂಲಕ, ಆಟೋಗಳಲ್ಲಿ ದೌಡಾಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದದರೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದತ್ತ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿರುವ ಸಾವಿರಾರು ಕಾರ್ಯಕರ್ತರು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೈಕೋರ್ಟ್ ಮುಂಭಾಗದ ರಸ್ತೆಯಲ್ಲಿಯೇ ಪೊಲೀಸರು ಪ್ರತಿಭಟನಾಕರರಿಗೆ ತಡೆಯೊಡ್ಡಿದ್ದಾರೆ.
ವಿಧಾನಸೌಧದ ಸುತ್ತ ಎಲ್ಲಾ ಗೇಟ್ ಗಳನ್ನು ಬಂದ್ ಮಾಡಿರುವ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಮತ್ತೊಂದು ತಂಡ ವಿಕಾಸಸೌಧದ ಗೇಟ್ ಮೂಲಕವಾಗಿ ಆಗಮಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುನ್ನುಗ್ಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಬಿಜೆಪಿಯ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ವಿಧನಾಸೌಧಕ್ಕೆ ಏಕಾಏಕಿ ಮುತ್ತಿಗೆ ಹಾಕಲು ವಿಜಯೇಂದ್ರ, ಆರ್.ಅಶೋಕ್ ಯತ್ನಿಸುತ್ತಿದ್ದಂತೆ ಪೊಲೀಸರು ವಿಜಯೇಂದ್ರ, ಆರ್.ಅಶೋಕ್, ಎಂಎಲ್ ಸಿ ಸಿ.ಟಿ.ರವಿ,ರವಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.




