Karnataka NewsLatestPolitics

*ಕಸ್ತೂರಿ ರಂಗನ್‌ ವರದಿ: ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಿತ್ತು: ಸಚಿವ ಮಧು ಬಂಗಾರಪ್ಪ*

ಕಸ್ತೂರಿ ರಂಗನ್‌ ವರದಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆಯುವುದಾಗಿ ಹೇಳಿದ ಮುಖ್ಯಮಂತ್ರಿಗೆ ಧನ್ಯವಾದ

ಪ್ರಗತಿವಾಹಿನಿ ಸುದ್ದಿ: ಕಸ್ತೂರಿ ರಂಗನ್‌ ವರದಿ ವಿಚಾರದಲ್ಲಿ ಬಿಜೆಪಿ ನಾಯಕರು ಹಾಗೂ ಸಂಸದರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಹೊರಡಿಸಿರುವುದು ರಾಜ್ಯ ಸರ್ಕಾರವಲ್ಲ; ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ. ರಾಜ್ಯದ ಹಿತಾಸಕ್ತಿ ಬಗ್ಗೆ ನಿಜವಾಗಿಯೂ ಬಿಜೆಪಿ ನಾಯಕರಿಗೆ, ಅದರಲ್ಲೂ ಬಿಜೆಪಿ ಸಂಸದರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಿತ್ತು. ಆದರೆ ಅವರು ಮಾಡುತ್ತಿರುವುದು ಕೇವಲ ರಾಜಕೀಯ ಡ್ರಾಮಾ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಟೀಕಿಸಿದರು.

Home add -Advt

ಬೆಂಗಳೂರಿನ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಶನಿವಾರ ಮಾತನಾಡಿದ ಅವರು, “ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಜನವಸತಿ ಪ್ರದೇಶ, ಕೃಷಿ ಭೂಮಿ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಗುರುತಿಸುವುದರಿಂದ ಮಲೆನಾಡಿನ ಜನರಲ್ಲಿ ಸಹಜವಾಗಿಯೇ ಆತಂಕ ಮೂಡಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಈ ವರದಿಯನ್ನು ತಿರಸ್ಕರಿಸುವ ಸ್ಪಷ್ಟ ನಿಲುವು ತೆಗೆದುಕೊಂಡಿದ್ದು, ಅದರ ಜಾರಿಗೆ ಯಾವುದೇ ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದರು.

“ಕಸ್ತೂರಿ ರಂಗನ್‌ ಸಮಿತಿ ವರದಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದು ಖಂಡನೀಯ. ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಮಲೆನಾಡಿನ ರೈತರು ಹಾಗೂ ಜನರು ಆತಂಕ ಪಡುವ ಅಗತ್ಯವಿಲ್ಲ” ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಧನ್ಯವಾದ

ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ವಿಶೇಷ ಅಧಿವೇಶನ ಕರೆದಿದ್ದರು. ಅವರ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ನನ್ನ ಅಣ್ಣನ ಸಮಾನರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇದೀಗ ಕಸ್ತೂರಿ ರಂಗನ್‌ ವರದಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆದು ರಾಜ್ಯದ ಹಿತಾಸಕ್ತಿ ಕಾಪಾಡಲು ಮುಂದಾಗಿರುವುದು ಸ್ವಾಗತಾರ್ಹ. ಇದಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ಕೇಂದ್ರ ಸರ್ಕಾರವೇ ಕರಡು ಅಧಿಸೂಚನೆ ಹೊರಡಿಸಿದೆ

ರಾಜ್ಯಕ್ಕೆ ಅನಾನುಕೂಲವಾಗುವ ಸಂಗತಿಗಳಿದ್ದಾಗ ಅವುಗಳನ್ನು ಕೇಂದ್ರಕ್ಕೆ ತಲುಪಿಸುವವರು ಬಿಜೆಪಿ ಸಂಸದರು. ರಾಜ್ಯದ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಅವರು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಕಸ್ತೂರಿ ರಂಗನ್‌ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ವಿಧಾನಸಭೆಯಲ್ಲಿ ತಿರಸ್ಕರಿಸುವ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಈ ಕುರಿತು ರಾಜ್ಯದ ನಿಲುವನ್ನು ಕೇಂದ್ರಕ್ಕೆ ಅಧಿಕೃತವಾಗಿ ತಿಳಿಸಲಾಗಿದೆ. ಆದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಮತ್ತೆ ಹೊಸ ಕರಡು ಅಧಿಸೂಚನೆ ಪ್ರಕಟಿಸಿರುವುದು ಖಂಡನೀಯ ಎಂದರು.

1,576 ಗ್ರಾಮಗಳ 20,668 ಚದರ ಕಿ.ಮೀ. ಪ್ರದೇಶ ಪ್ರಸ್ತಾಪ

ಕಸ್ತೂರಿ ರಂಗನ್‌ ಸಮಿತಿ ವರದಿಯಲ್ಲಿರುವಂತೆ ಕರ್ನಾಟಕದ 1,576 ಗ್ರಾಮಗಳ ವ್ಯಾಪ್ತಿಯ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸುವ ಪ್ರಸ್ತಾವನೆ ಕರಡು ಅಧಿಸೂಚನೆಯಲ್ಲಿ ಇದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ.ಜನವಸತಿ ಪ್ರದೇಶಗಳು ಹಾಗೂ ಕೃಷಿ ಭೂಮಿಯನ್ನೂ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ತರುವ ಪ್ರಸ್ತಾವನೆಯಿಂದ ಮಲೆನಾಡಿನ ರೈತರು ಆತಂಕಗೊಂಡಿದ್ದಾರೆ. ಆದರೆ ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಮಲೆನಾಡಿನ ಜನರ ಬದುಕು, ಕೃಷಿ ಹಾಗೂ ಅವರ ಹಕ್ಕುಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕಸ್ತೂರಿ ರಂಗನ್‌ ವರದಿ ಜಾರಿಗೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದರು.

Related Articles

Back to top button