Belagavi NewsBelgaum NewsKarnataka NewsLatestPolitics

*ಕುಕಡೊಳ್ಳಿ ಗ್ರಾಮಕ್ಕೆ ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ರೈತರ ಸಂಚಾರಕ್ಕೆ ಮತ್ತಷ್ಟು ಅನುಕೂಲ*

ನೂತನ ಬಸವೇಶ್ವರ ದೇವಸ್ಥಾನ ಉದ್ಘಾಟನೆ; ಗ್ರಾಮದೇವತೆ ದೇವಸ್ಥಾನಕ್ಕೆ ₹15 ಲಕ್ಷದ ಎರಡನೇ ಹಂತದ ಚೆಕ್ ಹಸ್ತಾಂತರ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗಿದ್ದು, ಗ್ರಾಮದ ವಿವಿಧ ಭಾಗಗಳಲ್ಲಿ ಸುಮಾರು ₹3 ಕೋಟಿ ವೆಚ್ಚದಲ್ಲಿ ಪೇವರ್ ಬ್ಲಾಕ್ ರಸ್ತೆ ಹಾಗೂ ಕೃಷಿ ಕ್ಷೇತ್ರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

Home add -Advt


ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಗ್ರಾಮಸ್ಥರು, ಹಿರಿಯರು ಹಾಗೂ ಮುಖಂಡರ ಸಮ್ಮುಖದಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದರು.


ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅವಶ್ಯಕವಾಗಿದ್ದು, ಈ ಹಿನ್ನೆಲೆಯಲ್ಲಿ ಕುಕಡೋಳ್ಳಿ ಗ್ರಾಮದಲ್ಲಿ ಪೇವರ್ ಬ್ಲಾಕ್ ರಸ್ತೆಗಳು ಹಾಗೂ ಕೃಷಿ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.


ಸುಮಾರು ₹3 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಕಾಮಗಾರಿಗಳಿಂದ ಗ್ರಾಮದ ಆಂತರಿಕ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ರೈತರು ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಅನುಕೂಲವಾಗಲಿದೆ.


ವಿಶೇಷವಾಗಿ ಕೃಷಿ ಕ್ಷೇತ್ರ ರಸ್ತೆಗಳ ನಿರ್ಮಾಣದಿಂದ ರೈತರು ತಮ್ಮ ಜಮೀನುಗಳಿಗೆ ತೆರಳುವಾಗ ಎದುರಿಸುತ್ತಿದ್ದ ಸಂಚಾರದ ಸಮಸ್ಯೆಗಳು ಕಡಿಮೆಯಾಗಲಿವೆ. ಕೃಷಿ ಉತ್ಪನ್ನಗಳನ್ನು ಸಾಗಿಸಲು, ಕೃಷಿ ಯಂತ್ರೋಪಕರಣಗಳನ್ನು ಜಮೀನುಗಳಿಗೆ ಕೊಂಡೊಯ್ಯಲು ಹಾಗೂ ಮಳೆಗಾಲದಲ್ಲಿಯೂ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಸಂಪರ್ಕ ಕಲ್ಪಿಸುವುದು ರೈತರ ದೃಷ್ಟಿಯಿಂದ ಮಹತ್ವದ್ದಾಗಿದೆ.


ಗ್ರಾಮಸ್ಥರು ಹಾಗೂ ರೈತರು ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಿದ್ದರು. ಇದೀಗ ಕಾಮಗಾರಿಗಳಿಗೆ ಚಾಲನೆ ದೊರೆತಿರುವುದರಿಂದ ಗ್ರಾಮಸ್ಥರು ಹಾಗೂ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.

ನೂತನ ಶ್ರೀ ಬಸವೇಶ್ವರ ದೇವಸ್ಥಾನ ಉದ್ಘಾಟನೆ

ಇದೇ ಸಂದರ್ಭದಲ್ಲಿ ಕುಕಡೋಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡವನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಉದ್ಘಾಟಿಸಿದರು.


ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಧಾರ್ಮಿಕ ಚಟುವಟಿಕೆಗಳಿಗೆ ಮತ್ತಷ್ಟು ಅನುಕೂಲ ಕಲ್ಪಿಸಲಿದೆ. ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಂಡು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಗ್ರಾಮದೇವತೆ ದೇವಸ್ಥಾನ ನಿರ್ಮಾಣಕ್ಕೆ ₹15 ಲಕ್ಷದ ಚೆಕ್ ಹಸ್ತಾಂತರ

ಕುಕಡೋಳ್ಳಿ ಗ್ರಾಮದಲ್ಲಿ ₹1.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಗ್ರಾಮದೇವತೆಯ ನೂತನ ದೇವಸ್ಥಾನ ಕಟ್ಟಡದ ಕಾಮಗಾರಿಗೆ ಸಹ ಮತ್ತಷ್ಟು ನೆರವು ಒದಗಿಸಲಾಗಿದೆ.


ಈ ಕಾಮಗಾರಿಯ ಹಿನ್ನೆಲೆಯಲ್ಲಿ ಈಗಾಗಲೇ ಮೊದಲ ಹಂತದ ಅನುದಾನ ನೀಡಲಾಗಿದ್ದು, ಇದೀಗ ಎರಡನೇ ಹಂತದ ₹15 ಲಕ್ಷ ಮೊತ್ತದ ಚೆಕ್ ಅನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ದೇವಸ್ಥಾನ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದರು.


ಗ್ರಾಮದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯ ಜೊತೆಗೆ ಮೂಲಸೌಕರ್ಯಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ದೇವಸ್ಥಾನ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮಸ್ಥರಿಗೆ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲು ಉತ್ತಮ ಸೌಲಭ್ಯ ದೊರೆಯಲಿದೆ.


ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ನೂತನ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಗ್ರಾಮದೇವತೆ ದೇವಸ್ಥಾನ ನಿರ್ಮಾಣಕ್ಕೆ ಅನುದಾನದ ಚೆಕ್ ಹಸ್ತಾಂತರ ಸೇರಿದಂತೆ ಒಂದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು.


ಈ ಸಂದರ್ಭದಲ್ಲಿ ಬಡೇಕೊಳ್ಳಮಠದ ಶ್ರೀ ನಾಗಯ್ಯ ಅಜ್ಜನವರು, ಗ್ರಾಮದ ಹಿರಿಯರು, ಪೂಜ್ಯರು, ಮಹಿಳೆಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button