*ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ದಾಖಲಾಗಿದ್ದ ಎಫ್ಐಆರ್ ನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಈ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ.ಮೋಹನಾ ಅವರಿದ್ದ ಪೀಠವು ಸಂವಿಧಾನದ 142ನೇ ವಿಧಿಯನ್ವಯ ಇರುವ ಪರಮಾಧಿಕಾರವನ್ನು ಬಳಸಿ ಈ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಿದೆ.
ಅಲ್ಲದೇ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಹೊರತುಪಡಿಸಿ, ಇತರ ಯಾವುದೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಖಲಾಗಿರುವ ಇಂತಹ ಎಫ್ಐಆರ್ಗಳ ತನಿಖೆಯನ್ನು ಮುಂದುವರಿಸಬಾರದು ಹಾಗೂ ಅವುಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬೇಕು ಎಂದು ತಿಳಿಸಿದೆ.



