*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ*

ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಅರ್ಜಿಗಳ ಪರಿಶೀಲನೆ
ಪ್ರಗತಿವಾಹಿನಿ ಸಿದ್ದಿ: ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಬೆಳಗಾವಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಎಂಎಲ್‌ಸಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಾರ್ವಜನಿಕರು ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು ಪರಿಶೀಲಿಸಿದರು.

ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳು, ವಿವಿಧ ಸೌಲಭ್ಯಗಳ ಪಡೆಯುವಿಕೆ, ಸ್ಥಳೀಯ ಮೂಲಸೌಕರ್ಯ, ಕಂದಾಯ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಸಮಸ್ಯೆಗಳ ಸ್ವರೂಪ ಹಾಗೂ ಸಂಬಂಧಿಸಿದ ಇಲಾಖೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಸಾಧ್ಯವಿರುವ ಕಡೆಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ಇನ್ನು ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ನಿರ್ಲಕ್ಷಿಸದೆ, ಅವುಗಳ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದರು.

ತಮ್ಮ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿಯ ಮುಂದೆ ಹೇಳಿಕೊಳ್ಳಲು ಅವಕಾಶ ದೊರೆತ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು. ತಮ್ಮ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರದ ದಾರಿ ತೋರಿಸಿದ ಚನ್ನರಾಜ ಹಟ್ಟಿಹೊಳಿ ಅವರಿಗೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದರು.
ಜನರ ಸಮಸ್ಯೆಗಳನ್ನು ಆಲಿಸುವುದು ಹಾಗೂ ಅವುಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಚನ್ನರಾಜ ಹಟ್ಟಿಹೊಳಿ ಅವರು ಆದ್ಯತೆ ನೀಡುತ್ತಿದ್ದಾರೆ.




