Karnataka NewsLatestPoliticsTravel

*ಶೀಘ್ರದಲ್ಲಿಯೇ ಏರಿಕೆಯಾಗುತ್ತಾ ಬಸ್ ಟಿಕೆಟ್ ದರ? ಸಾರಿಗೆ ಸಚಿವರು ಹೇಳಿದ್ದೇನು?*

ಹಂತಹಂತವಾಗಿ ರಸ್ತೆಗಿಳಿಯಲಿವೆ ಇವಿ ಬಸ್

Home add -Advt

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಾರಿಗೆ ಇಲಾಖೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್ ಗಳು ಲಭ್ಯವಾಗಲಿವೆ. ಗುರುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಅತಿ ಮಹತ್ತರ ನಿರ್ಧಾರ ಇದಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಕಾರ್ಯಕ್ರಮದಡಿ ಈ 4500 ಬಸ್ ಗಳನ್ನು ಪಡೆಯಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ವಾರ್ಷಿಕ 600 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. 20 ವರ್ಷಕ್ಕೆ ಸುಮಾರು 12,000 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಈ ಯೋಜನೆಗೆ ಖರ್ಚು ಮಾಡಲಿದೆ ಎಂದು ತಿಳಿಸಿದರು.

12 ಮೀಟರ್ ಉದ್ದದ 3800 ಎಲೆಕ್ಟ್ರಿಕ್ ಬಸ್ ಗಳು ಮತ್ತು 900 ಬಸ್ ಗಳು 9 ಮೀಟರ್ ಉದ್ದದ್ದಾಗಿರುತ್ತವೆ. ಈ ಪೈಕಿ 400 ಬಸ್ ಗಳು ಹವಾನಿಯಂತ್ರಿತವಾಗಿರುತ್ತವೆ.

ರಸ್ತೆಗಿಳಿಯಲಿವೆ ಇವಿ ಬಸ್
ವಾಹನ ತಯಾರಿಕಾ ಸಂಸ್ಥೆಗಳು ಹಂತಹಂತವಾಗಿ ಇವಿ ಬಸ್ ಗಳನ್ನು ತಯಾರಿಸಿ ಬಿಎಂಟಿಸಿಗೆ ಪೂರೈಕೆ ಮಾಡಲಿದ್ದು, ಹಂತಹಂತವಾಗಿ ಈ ಬಸ್ ಗಳನ್ನು ಬೆಂಗಳೂರು ನಾಗರಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಈ ಇವಿ ಬಸ್ ಗಳ ಸಂಚಾರದಿಂದ ಬೆಂಗಳೂರು ನಗರದ ಪರಿಸರ ಮಾಲಿನ್ಯ ಪ್ರಮಾಣ ಕಡಿಮೆಯಾಗಲಿದೆ. ಈ ಮೂಲಕ ರಾಜ್ಯ ಸರ್ಕಾರ ಪರಿಸರ ಸಂರಕ್ಷಣೆಯ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ವಿವಿಧ ಬಸ್ ತಯಾರಿಕಾ ಸಂಸ್ಥೆಗಳ ಮೂಲಕ ಈ ಎಲೆಕ್ಟ್ರಿಕ್ ಬಸ್ ಗಳನ್ನು ಪೂರೈಕೆ ಮಾಡುತ್ತದೆ. ಒಂದು ಕಿಲೋಮೀಟರ್ ಗೆ ಇಂತಿಷ್ಟು ನಿಗದಿತ ಹಣವನ್ನು ಬಿಎಂಟಿಸಿ ಸಂಸ್ಥೆಗಳಿಗೆ ಪಾವತಿಸಲಿದೆ ಎಂದು ಸಾರಿಗೆ ಸಚಿವರು ಮಾಹಿತಿ ನೀಡಿದರು.

ಕೇಂದ್ರದಿಂದ 2 ಸಾವಿರ ಕೋಟಿ ಸಾಲ
ಕೇಂದ್ರ ಸರ್ಕಾರದಿಂದ 2 ಸಾವಿರ ಕೋಟಿ ರೂಪಾಯಿ ಸಾಲ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಡೀ ರಾಜ್ಯದಲ್ಲಿ ಹೊಸ ಬಸ್ ಡಿಪೋ ನಿರ್ಮಾಣ ಮತ್ತು ಹಳೆಯ ಬಸ್ ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತದೆ ಎಂದು ಹೇಳಿದರು.

1 ಕೋಟಿ ಶಕ್ತಿ ಸ್ಮಾರ್ಟ್ ಕಾರ್ಡ್
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಮೊದಲ ಹಂತದಲ್ಲಿ ಉಚಿತ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. 250 ಕೋಟಿ ರೂಪಾಯಿಗಳ ವೆಚ್ಚವಾಗುತ್ತದೆ. ಸದ್ಯದಲ್ಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಪ್ರಯಾಣಿಕರಿಗೆ ಅತ್ಯಲ್ಪ ಹೊರೆ
ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನ ದರಗಳನ್ನು ಹೆಚ್ಚಳ ಮಾಡಿದೆ. ಹೀಗಿದ್ದಾಗ್ಯೂ ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ.

ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

Related Articles

Back to top button