Belagavi NewsBelgaum NewsLatestPolitics

*ಪ್ರಜಾಸೇವೆ ಆಂದೋಲನದ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರವು ನೂತನವಾಗಿ ಆರಂಭಿಸಿರುವ ಪ್ರಜಾಸೇವೆ ಇಲಾಖೆಯಿಂದ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೆಚ್ಚೆಚ್ಚು ಕಾರ್ಯಪ್ರವೃತ್ತರಾಗುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸೂಚನೆ ನೀಡಿದರು.

ತಾಲ್ಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶನಿವಾರ ತಾಲ್ಲೂಕು ಆಡಳಿತವು ಹಮ್ಮಿಕೊಂಡ ಪ್ರಜಾಸೇವೆ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಕುಂದು- ಕೊರತೆಗಳನ್ನು ನೀಗಿಸಲು ಪ್ರಜಾಸೇವೆ ಆಂದೋಲನವು ಉಪಯುಕ್ತವಾಗಲಿದೆ ಎಂದರು.

Home add -Advt

ತಾಲೂಕಿನ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳು ಹಾಗೂ ಗ್ರಾಮಸ್ಥರ ಬೇಡಿಕೆಗಳ ಕುರಿತು ಅಧಿಕಾರಿಗಳು ವಿಶೇಷವಾಗಿ ಗಮನಹರಿಸಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅರ್ಜಿ ಮೂಲಕ ಸಂಬಂಧಿಸಿದ ಇಲಾಖೆಗೆ ಸಲ್ಲಿಸಿದರೆ, ಅವುಗಳನ್ನು ಪರಿಶೀಲಿಸಿ ಸರ್ಕಾರದ ಮಟ್ಟದಲ್ಲಿ ಸಾಧ್ಯವಾದಷ್ಟು ನೆರವು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ, ನಿಗದಿತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಕೆಲಸಕ್ಕಾಗಿ ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆದಾಡುವಂತಾಗಬಾರದು ಎಂದು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ರೈತರ ಹಿತಾಸಕ್ತಿ ಹಾಗೂ ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಿ, ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಜನರಿಗೆ ಅನುಕೂಲ ಕಲ್ಪಿಸುವುದೇ ನಮ್ಮ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದರು.

ನೀರಿನ ಸಮಸ್ಯೆ ಎದುರಾದ ಪ್ರದೇಶಗಳಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೀರು, ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜನರಿಂದ ಬಂದಿರುವ ಬೇಡಿಕೆಗಳನ್ನೂ ಪರಿಶೀಲಿಸಿ ಹಂತ- ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ, ತಾ.ಪಂ. ಇಓ ಪ್ರಸನ್ನ ನೆರಳೇಕರ, ಅರಭಾವಿ ಸಿಡಿಪಿಓ ಯಲ್ಲಪ್ಪ ಗದಾಡಿ,  ಹೆಸ್ಕಾಂ ಅಧಿಕಾರಿ ಎಂ.ಎಸ್. ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಮೂಡಲಗಿ ಪುರಸಭೆ ಮುಖ್ಯಾಧಿಕಾರಿ(ಪ್ರ),  ಸಿ.ಬಿ.ಪಾಟೀಲ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರು.

ವಿವಿಧ ಇಲಾಖೆಗಳ ಸುಮಾರು 86 ಅರ್ಜಿಗಳು ಸ್ವೀಕೃತಗೊಂಡಿದ್ದು, ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದನೆ ಮಾಡಲಾಗುವುದು ಎಂದು ತಹಶೀಲ್ದಾರ ಗುಡುಮೆ ತಿಳಿಸಿದರು.

Related Articles

Back to top button