Belagavi NewsBelgaum NewsKannada NewsKarnataka News

*ಮಹಿಳೆಯರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಸೇವೆ ನೀಡಿ: ನಾಗಲಕ್ಷ್ಮಿ ಚೌಧರಿ ಸೂಚನೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು, ಕಚೇರಿಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರ (ಸೆ.08) ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Home add -Advt

ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪೊಲೀಸ್ ಠಾಣೆಗೆ ಬಂದಾಗ ಪೊಲೀಸ್ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ದೂರು ನೀಡಲು ಬಂದ ಮಹಿಳೆಯರೊಂದಿಗೆ ಯಾವುದೇ ರೀತಿಯ ದುರ್ವರ್ತನೆ ತೋರದೆ, ಜನಸ್ನೇಹಿ ಹಾಗೂ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು. ಮಹಿಳೆಯರು ನೀಡುವ ದೂರುಗಳಲ್ಲಿ ಸತ್ಯಾಂಶವಿದ್ದಲ್ಲಿ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೂರು ದಾಖಲಿಸದೆ ವಿನಾಕಾರಣ ನೆಪಗಳನ್ನು ಹೇಳುವುದು ಅಥವಾ ಪ್ರಕರಣ ದಾಖಲಿಸಲು ವಿಳಂಬ ಮಾಡುವುದನ್ನು ಸಹಿಸಲಾಗುವುದಿಲ್ಲ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರಾಕರಿಸಿದಲ್ಲಿ ಅಥವಾ ಅನಗತ್ಯ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಮಹಿಳೆಯರು ನೇರವಾಗಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಬಹುದು. ಅಂತಹ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಶಾಲೆಗಳಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಕ್ಕಳಿಗೆ ಪೋಕ್ಸೋ ಕಾಯ್ದೆಯ ಕುರಿತು ನಿರಂತರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳಿಗೆ ತಮ್ಮ ಸುರಕ್ಷತೆ, ಹಕ್ಕುಗಳು ಹಾಗೂ ಅಪಾಯಕಾರಿ ಸಂದರ್ಭಗಳನ್ನು ಗುರುತಿಸುವ ಕುರಿತು ಸರಳವಾಗಿ ತಿಳಿಸಬೇಕು. ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ನಡೆಯುತ್ತಿರುವ ‘ಗುಡ್ ಟಚ್–ಬ್ಯಾಡ್ ಟಚ್’ ಅರಿವು ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಬೇಕು ಎಂದು ಸೂಚಿಸಿದರು.

ಮಹಿಳಾ ದೌರ್ಜನ್ಯ ತಡೆಗೆ ಇಲಾಖೆಗಳ ಸಮನ್ವಯ ಅಗತ್ಯ

ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಾಗೂ ಬಾಲ್ಯ ವಿವಾಹ ನಿಯಂತ್ರಣಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಸಂಸ್ಥೆಗಳ ಜೊತೆಗೆ ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳ ಸಹಕಾರವನ್ನೂ ಪಡೆದು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹೇಳಿದರು.

ಬಾಲ್ಯ ವಿವಾಹ ನಡೆಯದಂತೆ ಗ್ರಾಮ ಹಾಗೂ ತಾಲೂಕು ಮಟ್ಟದಲ್ಲಿ ನಿರಂತರವಾಗಿ ನಿಗಾ ವಹಿಸಬೇಕು. ಕೈಗೊಳ್ಳುವ ಕ್ರಮಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಕುರಿತು ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ಜಿಲ್ಲಾಡಳಿತಕ್ಕೆ ನಿಯಮಿತವಾಗಿ ವರದಿ ಸಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ನಿಲಯಗಳಲ್ಲಿ ಉತ್ತಮ ಊಟ, ಮೂಲಸೌಕರ್ಯ ಕಡ್ಡಾಯ

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯದ ಜೊತೆಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರವನ್ನು ಕಡ್ಡಾಯವಾಗಿ ಒದಗಿಸಬೇಕು. ವಸತಿ ನಿಲಯಗಳಲ್ಲಿನ ಆಹಾರ, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕುರಿತು ಮೇಲಾಧಿಕಾರಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ವಸತಿ ನಿಲಯಗಳ ಸಮೀಪ ಬಸ್ ನಿಲ್ದಾಣಕ್ಕೆ ಕ್ರಮ

ಅಗತ್ಯವಿರುವ ವಸತಿ ನಿಲಯಗಳ ಸಮೀಪದಲ್ಲಿ ಬಸ್ ನಿಲ್ದಾಣಗಳ ಸೌಲಭ್ಯ ಇಲ್ಲದಿದ್ದರೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಕೂಡಲೇ ಸಮಾಲೋಚನೆ ನಡೆಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಹೇಳಿದರು.

ಬಿಮ್ಸ್‌ನಲ್ಲಿ ಮಹಿಳೆಯರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ

ಬಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಆಸ್ಪತ್ರೆಯಲ್ಲಿನ ಕೆಲವು ಶೌಚಾಲಯಗಳು ಬೀಗ ಹಾಕಿರುವ ಸ್ಥಿತಿಯಲ್ಲಿರುವುದು ಗಮನಕ್ಕೆ ಬಂದಿದೆ. ಇದರಿಂದ ಗರ್ಭಿಣಿಯರು ಸೇರಿದಂತೆ ಚಿಕಿತ್ಸೆಗಾಗಿ ಬರುವ ಮಹಿಳೆಯರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.

ಗರ್ಭಿಣಿಯರು ರಕ್ತ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಆಸ್ಪತ್ರೆಯೊಳಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಆಸ್ಪತ್ರೆಯ ಎಲ್ಲ ಶೌಚಾಲಯಗಳನ್ನು ಕೂಡಲೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಬಿಮ್ಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌರವಯುತ ಮತ್ತು ಸುಲಭವಾಗಿ ಲಭ್ಯವಾಗುವ ಸೇವೆ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಮಹಿಳೆಯರ ಸುರಕ್ಷತೆ, ಗೌರವ ಮತ್ತು ಮೂಲಭೂತ ಸೌಲಭ್ಯಗಳ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ವರದಕ್ಷಿಣೆ ಕಿರುಕುಳ, ಕೊಲೆ, ಆಸ್ತಿ ವಿವಾದ, ಕೌಟುಂಬಿಕ ಕಲಹ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳೆಯರಿಂದ ಸ್ವೀಕರಿಸಲಾದ ದೂರುಗಳನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ವಿಚಾರಣೆ ನಡೆಸಿದರು. ದೂರುದಾರರ ಅಹವಾಲುಗಳನ್ನು ಆಲಿಸಿ, ಪ್ರಕರಣಗಳ ವಾಸ್ತವಾಂಶವನ್ನು ಪರಿಶೀಲಿಸಿ, ನೊಂದವರಿಗೆ ಶೀಘ್ರ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಎದುರಾಗುತ್ತಿರುವ ಅವ್ಯವಸ್ಥೆಗಳು, ಮೂಲಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಾಯಿತು. ಸಾರ್ವಜನಿಕರಿಂದ ಸ್ವೀಕರಿಸಲಾದ ದೂರುಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ನಿಯಮಾನುಸಾರ ಪರಿಶೀಲಿಸಿ, ಅರ್ಹ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ಒದಗಿಸಬೇಕು. ಮಹಿಳೆಯರು ಹಾಗೂ ನೊಂದವರು ತಮ್ಮ ಸಮಸ್ಯೆಗಳಿಗೆ ನ್ಯಾಯ ದೊರಕುವ ವಿಶ್ವಾಸ ಮೂಡುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ. ಆರ್, ನಗರ ಪೋಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮಹಿಳಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button