Belagavi NewsBelgaum NewsKarnataka NewsLatest

*ಬೆಳಗಾವಿ ಅಗ್ನಿ ದುರಂತ: ಘಟನಾ ಸ್ಥಳಕ್ಕೆ ಗಣ್ಯರ ದಂಡು*

ಮೃತರ ಕುಟುಂಬಕ್ಕೆ ಸಾಂತ್ವನ; ಸೂಕ್ತ ಪರಿಹಾರಕ್ಕೆ ಆಗ್ರಹ — ಶಾರ್ಟ್ ಸರ್ಕ್ಯೂಟ್ ಶಂಕೆಯಲ್ಲಿ ತನಿಖೆ

Home add -Advt

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನಗರದ ಚವ್ಹಾಣ್ ಗಲ್ಲಿ ಪಕ್ಕದ ಡೋರ್ ಗಲ್ಲಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಆಸೀಫ್ ಸೇಠ್, ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ಮುಖಂಡ ಡಾ. ರವಿ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆದರು.

ಘಟನಾ ಸ್ಥಳ ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಅವರು, ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದರು.

ಗಾಯಗೊಂಡಿರುವ ಗಜಾನನ ಅವರಿಗೆ ಶೇ.90ರಷ್ಟು ಹಾಗೂ ಅವರ ಪುತ್ರ ರೋಷನ್ ಅವರಿಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿವೆ. ಗಜಾನನ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಕಂಡುಬಂದಿದೆ. ಫ್ರಿಡ್ಜ್ ಸ್ಫೋಟಗೊಂಡಿರುವ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಎಫ್‌ಎಸ್‌ಎಲ್ ಹಾಗೂ ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹ

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಅನಿಲ್ ಬೆನಕೆ ಅವರು, ದುರಂತದಲ್ಲಿ ಬಡ ಕುಟುಂಬವೊಂದು ನಲುಗಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

“ಘಟನೆಯಲ್ಲಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇದು ಅತ್ಯಂತ ದುಃಖಕರ ಘಟನೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯಬೇಕು. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು,” ಎಂದು ಅವರು ಒತ್ತಾಯಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಣ್ಯರು ಹಾಗೂ ಅಧಿಕಾರಿಗಳು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಅಗತ್ಯ ನೆರವು ಮತ್ತು ಚಿಕಿತ್ಸಾ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಹಬ್ಬದ ದಿನವೇ ಸಂಭವಿಸಿದ ಈ ದುರಂತ ಬೆಳಗಾವಿ ಜನತೆಯನ್ನು ತೀವ್ರವಾಗಿ ಕಂಗೆಡಿಸಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಪೊಲೀಸ್, ಎಫ್‌ಎಸ್‌ಎಲ್ ಹಾಗೂ ಹೆಸ್ಕಾಂ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Related Articles

Back to top button