
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿಯ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೆಪಿಎಸ್ ಸಿ ಸದಸ್ಯೆ ಡಾ.ಶಾಂತಾ ಹೊಸಮನಿ ಕೊನೆಗೂ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬಂಧನ ಭೀತಿಯಲ್ಲಿದ್ದ ಕೆಪಿಎಸ್‌ಸಿ ಸದಸ್ಯೆ ಡಾ.ಶಾಂತಾ ಹೊಸಮನಿ ತಲೆಮರೆಸಿಕೊಂಡಿದ್ದರು. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯ ಕಳೆದ ವಾರ ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕೆಎಎಸ್ , ಪಶುವೈದ್ಯಾಧಿಕಾರಿ ನೇಮಕಾತಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ AEE ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಲಂಚ ಪಡೆದು ಹುದ್ದೆ ಕೊಡಿಸಲು ಮುಂದಾಗಿದ್ದಾರೆ ಎಂಬ ಗಂಭೀರ ಆರೋಪಗಳು ಶಾಂತಾ ಹೊಸಮನಿ ಮೇಲಿದೆ. ಹಿನ್ನೆಲೆಯಲ್ಲಿ ಇವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಜಾರಿ ನಿರ್ದೇಶನಾಲಯ ಹಾಗೂ ಸಿಐಡಿ ಪ್ರಕರಣ ತನಿಖೆ ಕೈಗೆತ್ತಿಕೊಂಡ ಬಳಿಕ ಅವರು ತಲೆಮರೆಸಿಕೊಂಡಿದ್ದರು. ಶಾಂತಾ ಹೊಸಮನಿ ಅವರು ದೇಶ ಬಿಟ್ಟು ಹೋಗದಂತೆ ತಡೆಯಲು ಲುಕ್‌ಔಟ್ ನೋಟಿಸ್ ಕೂಡ ಜಾರಿಯಾಗಿತ್ತು.
2023-24ರ ಕೆಎಎಸ್ ಪರೀಕ್ಷೆ ಬರೆದು ಸಂದರ್ಶನ ಮುಗಿಸಿ ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿ ಮಮಿತಾ ಶಾಂತಾ ಹೊಸಮನಿ ಅವರ ಮೂಲಕ ಅಕ್ರಮವಾಗಿ ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಬೆನ್ನಲ್ಲೇ ಸಿಐಡಿ ಕಲಬುರಗಿ ನಗರದ ನ್ಯೂ ಓಝಾ ಲೇಔಟ್‌ನಲ್ಲಿರುವ ಮಮಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ಡಾ. ಶಾಂತಾ ಹೊಸಮನಿ ಅವರು ಜೂನ್ 2021 ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಆಯ್ಕೆಯಾಗಿದ್ದರು. ಆಗಿನ ರಾಜ್ಯ ಸರ್ಕಾರವು ಅವರನ್ನು 6 ವರ್ಷಗಳ ಅವಧಿಗೆ ಅಧಿಕಾರಿಗಳ ವರ್ಗದ ಅಡಿಯಲ್ಲಿ ಕೆಪಿಎಸ್‌ಸಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದಕ್ಕೂ ಮುನ್ನ ಅವರು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.




