*7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆ ಬರದಿದ್ದು ನೋಡಿ ಶಾಸಕ ಪ್ರದೀಪ್ ಈಶ್ವರ್‌ಗೆ ಶಾಕ್: 180 ಶಿಕ್ಷಕರಿಗೆ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 7ನೇ ತರಗತಿಗೆ ತಲುಪಿದ ವಿದ್ಯಾರ್ಥಿಗಳಿಗೂ ಕನ್ನಡದ ಮೂಲ ಅಕ್ಷರಮಾಲೆ ಹಾಗೂ ಸರಳ ಲೆಕ್ಕಾಚಾರಗಳು ಸರಿಯಾಗಿ ಬಾರದಿರುವುದು ಬೆಳಕಿಗೆ ಬಂದಿದ್ದು ಇದನ್ನು ಕಂಡು ಶಾಸಕ ಪ್ರದೀಪ್ ಈಶ್ವರ್ ಆಘಾತ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಕಲಿಕಾ ಮಟ್ಟದ ಕುರಿತು ಬೇಸರ ವ್ಯಕ್ತಪಡಿಸಿರುವ ಅವರು, ಶಿಕ್ಷಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ಷೇತ್ರದ 180 ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಶಾಸಕ ಪ್ರದೀಪ್ ಈಶ್ವರ್ ಅವರು ಕ್ಷೇತ್ರ ಸಂಚಾರದ ಸಂದರ್ಭದಲ್ಲಿ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳಿಗೆ ಕನಿಷ್ಠ ‘ಅ, ಆ, ಇ, ಈ’ ಅಕ್ಷರಗಳನ್ನೂ ಸರಿಯಾಗಿ ಬರೆಯಲು ಅಥವಾ ಗುರುತಿಸಲು ಸಾಧ್ಯವಾಗದಿರುವುದು ಗಮನಕ್ಕೆ ಬಂದಿದೆ. ಇದರ ಜೊತೆಗೆ ಕೂಡಿಸುವುದು ಹಾಗೂ ಕಳೆಯುವಂತಹ ಮೂಲ ಗಣಿತದ ಲೆಕ್ಕಾಚಾರಗಳಲ್ಲಿಯೂ ವಿದ್ಯಾರ್ಥಿಗಳು ಹಿಂದುಳಿದಿರುವುದು ಶಾಸಕರ ಗಮನಕ್ಕೆ ಬಂದಿದೆ.
ವಿದ್ಯಾರ್ಥಿಗಳು ಮೂಲಭೂತ ಕಲಿಕೆಯಲ್ಲಿ ಹಿಂದುಳಿದಿರುವುದಕ್ಕೆ ಕಾರಣವೇನು ಎಂಬುದನ್ನು ಪರಿಶೀಲಿಸುವಂತೆ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ. 1ರಿಂದ 7ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿರುವ ಶಿಕ್ಷಕರಿಂದ ಸಮಜಾಯಿಷಿ ಪಡೆಯುವಂತೆ ಹಾಗೂ ಅಗತ್ಯವಿದ್ದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕರ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದೀಗ 180 ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
2026-27ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರಗತಿ ಹಾಗೂ ಕಲಿಕಾ ಮಟ್ಟವನ್ನು ಪರಿಶೀಲಿಸಲಾಗಿದೆ. ಕಲಿಕೆಯ ಗುಣಮಟ್ಟದಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಹಿಂದುಳಿದಿರುವ ವಿದ್ಯಾರ್ಥಿಗಳ ಕುರಿತು ಪರಿಶೀಲನೆ ನಡೆಸಿ, ಅವರಿಗೆ 1ರಿಂದ 7ನೇ ತರಗತಿವರೆಗೆ ಬೋಧನಾ ಕಾರ್ಯ ನಿರ್ವಹಿಸಿದ್ದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ನೋಟಿಸ್ ಪಡೆದ ಶಿಕ್ಷಕರಿಂದ ಸಮಜಾಯಿಷಿ ಪಡೆದು, ಅವರ ಉತ್ತರವನ್ನು ಪರಿಶೀಲಿಸಿದ ಬಳಿಕ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಮೂಲಭೂತ ಕಲಿಕಾ ಸಾಮರ್ಥ್ಯವನ್ನು ಸುಧಾರಿಸುವುದು ಹಾಗೂ ಸರ್ಕಾರಿ ಶಾಲೆಗಳಲ್ಲಿನ ಬೋಧನಾ ಗುಣಮಟ್ಟವನ್ನು ಪರಿಶೀಲಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

