CrimeKarnataka NewsLatest

*ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ: ರಜೆ ಮೇಲೆ ಊರಿಗೆ ಬಂದಿದ್ದ ITBP ಯೋಧನ ದುರಂತ ಅಂತ್ಯ*

*Bike rams into stationary tractor*: *Tragic end for ITBP soldier visiting hometown on leave*

ಪ್ರಗತಿವಾಹಿನಿ ಸುದ್ದಿ: ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯ ಯೋಧರೊಬ್ಬರು ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ತಡರಾತ್ರಿ ನಡೆದಿದೆ.

ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಅವರು, ತಡರಾತ್ರಿ ತಮ್ಮ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಚನ್ನವೀರೇಗೌಡ ಅವರು ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಚನ್ನವೀರೇಗೌಡ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಮಾಹಿತಿ ತಿಳಿದು ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

Back to top button