
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಜೀವಮಾನ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗುಜರಾತ್ನ ಕೆವಾಡಿಯಾದ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸಿದರು.
ಚಿತ್ರರಂಗಕ್ಕೆ ಅನಂತ್ ನಾಗ್ ನೀಡಿರುವ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭಾರತೀಯ ಚಿತ್ರರಂಗದ ಹಲವಾರು ಪ್ರತಿಭಾವಂತ ನಟ-ನಟಿಯರು, ತಂತ್ರಜ್ಞರ ಸಮ್ಮುಖದಲ್ಲಿ ಅನಂತ್ ನಾಗ್ ಅವರು ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು. ಪ್ರಶಸ್ತಿ ಸ್ವೀಕಾರಕ್ಕೂ ಮುಂಚೆಯೇ ಅನಂತ್ ನಾಗ್ ಅವರಿಗೆ ಇಡೀ ಸಭಾಂಗಣವೇ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿತು.
ಭಾರತೀಯ ಸಿನಿಮಾದ ಪಿತಾಮಹ ದಾದಾ ಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಅನಂತ್ ನಾಗ್ ಅವರು 5 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅನಂತ್ ನಾಗ್ ಅವರು 5 ಫಿಲ್ಮ್ ಫೇರ್ ಪ್ರಶಸ್ತಿ, 5 ಕನ್ನಡ ಚಲನಚಿತ್ರ ಪ್ರಶಸ್ತಿಗೆ , 2025ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.




