Belagavi NewsBelgaum NewsKannada NewsKarnataka NewsNational

*ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭರ್ಜರಿ ಸಿದ್ಧತೆ: ಹೊಂಡಗಳ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕಪಿಲೇಶ್ವರ ಸೇರಿದಂತೆ ವಿವಿಧ ಗಣೇಶ ವಿಸರ್ಜನಾ ಹೊಂಡಗಳಲ್ಲಿನ ಸಿದ್ಧತೆಗಳನ್ನು ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಸರ್ಜನಾ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ, ಜನದಟ್ಟಣೆ ನಿಯಂತ್ರಣದ ಜೊತೆಗೆ ಗಣೇಶ ಮೂರ್ತಿಗಳ ವಿಸರ್ಜನೆ ಪ್ರಕ್ರಿಯೆ ಸುರಕ್ಷಿತ ಹಾಗೂ ಸುಗಮವಾಗಿ ನಡೆಯುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಸರ್ಜನಾ ಹೊಂಡಗಳ ಆವರಣದಲ್ಲಿ ಕ್ರೇನ್, ನೀರು, ವಿದ್ಯುತ್ ಬೆಳಕು, ಮಂಟಪ ಹಾಗೂ ಧ್ವನಿವರ್ಧಕ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಅಲ್ಲದೇ ಪೊಲೀಸ್, ಅಗ್ನಿಶಾಮಕ ದಳ ಹಾಗೂ ಜೀವ ರಕ್ಷಕ ಸಿಬ್ಬಂದಿ ನಿಯೋಜನೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ನಿರ್ದೇಶನ ನೀಡಿದರು.

ಎರಡು ದಿನಗಳೊಳಗಾಗಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಆಯುಕ್ತರು, ಬಳಿಕ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಅಭಿಯಂತರ ಲಕ್ಷ್ಮೀ ಸುಳಗೇಕರ್, ನಗರಸೇವಕರಾದ ರಾಜು ಭಾತಕಂಡೆ, ಗಿರೀಶ ಧೋಂಗಡಿ, ಮಂಗೇಶ ಪವಾರ ಸೇರಿದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related Articles

Back to top button