
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮಾಂಜಿನಪ್ಪ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಜಮೀನು ಮಾರಾಟದ ಬಾಕಿ ಹಣ ಬಾರದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರುವುದಾಗಿ ರಾಮಾಂಜಿನಪ್ಪ ಉಲ್ಲೇಖಿಸಿದ್ದು, ಚಿಕ್ಕಬಳ್ಳಾಪುರ ನಗರದಲ್ಲಿ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ಮೇಲ್ಭಾಗದಲ್ಲಿರುವ ರೈತ ಸಂಘದ ಕಚೇರಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ರಾಮಾಂಜಿನಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮಾಂಜಿನಪ್ಪ ಅವರು ತಮ್ಮ ಮಾಲೀಕತ್ವದ 35 ಗುಂಟೆ ಜಮೀನನ್ನು ರವೀಂದ್ರರೆಡ್ಡಿ ಎಂಬವರಿಗೆ ಒಟ್ಟು ₹77 ಲಕ್ಷಕ್ಕೆ ಮಾರಾಟ ಮಾಡಿದ್ದರು. ಆದರೆ ಜಮೀನು ಖರೀದಿಸಿದ್ದ ರವೀಂದ್ರರೆಡ್ಡಿ ಮುಂಗಡ ಹಾಗೂ ಕಂತುಗಳ ರೂಪದಲ್ಲಿ ₹57.50 ಲಕ್ಷ ಮಾತ್ರ ಪಾವತಿಸಿದ್ದು, ಉಳಿದ ₹19.50 ಲಕ್ಷ ಬಾಕಿ ಉಳಿಸಿಕೊಂಡಿದ್ದರು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿದ್ದಾರೆ.
ಕಳೆದ ಹತ್ತು ತಿಂಗಳಿಂದ ಬಾಕಿ ಹಣ ನೀಡದೆ ಕಾಲಹರಣ ಮಾಡುತ್ತಿದ್ದು, ಇದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗಿ ರಾಮಾಂಜಿನಪ್ಪ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬರಬೇಕಿದ್ದ ಹಣ ಕೈಸೇರದೆ ತೀವ್ರ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಿದ್ದಾರೆ.
ರೈತರ ಪರವಾಗಿ ಹಲವು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ರೈತ ಸಂಘದ ತಾಲೂಕು ಅಧ್ಯಕ್ಷರೊಬ್ಬರು ತಾವು ಕಾರ್ಯನಿರ್ವಹಿಸುತ್ತಿದ್ದ ಕಚೇರಿಯಲ್ಲೇ ದುರಂತ ಅಂತ್ಯ ಕಂಡಿರುವುದು ಜಿಲ್ಲೆಯ ರೈತ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದೆ.
ಡೆತ್‌ನೋಟ್‌ನಲ್ಲಿರುವ ಅಂಶಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಮೀನು ಮಾರಾಟ ಹಾಗೂ ಬಾಕಿ ಹಣಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.


