*ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು: ಇಂದು, ನಾಳೆ ಭಾರಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ವಾಯುಭಾರ ಕುಸಿತ ಹಾಗೂ ಸುಳಿಗಾಳಿಯ ಪರಿಣಾಮ ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 23 ಮತ್ತು 24ರಂದು ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸೆ.23ರಂದು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೀದರ್, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸೆ.24ರಂದು ಕರಾವಳಿ ಕರ್ನಾಟಕ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯೊಂದಿಗೆ ಗಂಟೆಗೆ ಸುಮಾರು 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ತಗ್ಗು ಪ್ರದೇಶಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.



