
ಪ್ರಗತಿವಾಹಿನಿ ಸುದ್ದಿ: ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ರಾತ್ರಿ ಪಾಳಯದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾರುಣ ಘಟನೆ ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ಬಂಡಿ ಹರ್ಲಾಪುರ ಗ್ರಾಮದ ನಿವಾಸಿಗಳಾದ ಹುಲ್ಲೇಶ್ ವಾಲಿಕಾರ ಹಾಗೂ ಮಾರುತಿ ಎಂದು ಗುರುತಿಸಲಾಗಿದೆ. ಇಬ್ಬರೂ ಮುಕುಂದ್ ಸ್ಟೀಲ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು.
ಘಟನೆ ಮಾಹಿತಿ ತಿಳಿದು ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




